ಬಸವಣ್ಣ   
  ವಚನ - 4     
 
ಅಯ್ಯಾ, ಏಳೇಳು ಜನ್ಮದಲ್ಲಿ ಶಿವಭಕ್ತನಾಗಿ ಬಾರದಿರ್ದೊಡೆ ನಿಮ್ಮಾಣೆ, ನಿಮ್ಮ ಪ್ರಮಥರಾಣೆ ! ನಿಮ್ಮ ಪ್ರಸಾದಕ್ಕಲ್ಲದೆ ಬಾಯ್ದೆರೆಯೆನಯ್ಯಾ. ಪ್ರಥಮ ಭವಾಂತರದಲ್ಲಿ ಶಿಲಾದನೆಂಬ ಗಣೇಶ್ವರನ ಮಾಡಿ ಹೆಸರಿಟ್ಟು ಕರೆದು ನಿಮ್ಮ ಭೃತ್ಯನ ಮಾಡಿ ಎನ್ನನಿರಿಸಿಕೊಂಡಿರ್ದಿರಯ್ಯಾ. ಎರಡನೆಯ ಭವಾಂತರದಲ್ಲಿ ಸ್ಕಂದನೆಂಬ ಗಣೇಶ್ವರನ ಮಾಡಿ ಹೆಸರಿಟ್ಟು ಕರೆದು ನಿಮ್ಮ ಕಾರುಣ್ಯವ ಮಾಡಿರಿಸಿಕೊಂಡಿರ್ದಿರಯ್ಯಾ. ಮೂರನೆಯ ಭವಾಂತರದಲ್ಲಿ ನೀಲಲೋಹಿತನೆಂಬ ಗಣೇಶ್ವರನ ಮಾಡಿ ಹೆಸರಿಟ್ಟು ಕರೆದು ನಿಮ್ಮ ಲೀಲಾವಿನೋದದಿಂದಿರಿಸಿಕೊಂಡಿರ್ದಿರಯ್ಯಾ. ನಾಲ್ಕನೆಯ ಭವಾಂತರದಲ್ಲಿ ಮನೋಹರನೆಂಬ ಗಣೇಶ್ವರನ ಮಾಡಿ ಹೆಸರಿಟ್ಟು ಕರೆದು ನಿಮ್ಮ ಮನಃಪ್ರೇರಕನಾಗಲೆಂದಿರಿಸಿಕೊಂಡಿರ್ದಿರಯ್ಯಾ. ಐದನೆಯ ಭವಾಂತರದಲ್ಲಿ ಕಾಲಲೋಚನನೆಂಬ ಗಣೇಶ್ವರನ ಮಾಡಿ ಹೆಸರಿಟ್ಟು ಕರೆದು ಸರ್ವಕಾಲ ಸಂಹಾರವ ಮಾಡಿಸುತ್ತಿರ್ದಿರಯ್ಯಾ. ಆರನೆಯ ಭವಾಂತರದಲ್ಲಿ ವೃಷಭನೆಂಬ ಗಣೇಶ್ವರನ ಮಾಡಿ ಹೆಸರಿಟ್ಟು ಕರೆದು ನಿಮಗೇರಲು ವಾಹನವಾಗಲೆಂದಿರಿಸಿಕೊಂಡಿರ್ದಿರಯ್ಯಾ. ಏಳನೆಯ ಭವಾಂತರದಲ್ಲಿ ಬಸವನೆಂಬ ಗಣೇಶ್ವರನ ಮಾಡಿ ಹೆಸರಿಟ್ಟು ಕರೆದು ನಿಮ್ಮ ಒಕ್ಕುದ ಮಿಕ್ಕುದಕ್ಕೆ ಯೋಗ್ಯನಾಗಲೆಂದಿರಿಸಿಕೊಂಡಿರ್ದಿರಯ್ಯಾ. ಇದು ಕಾರಣ ಕೂಡಲ ಸಂಗಮದೇವಾ ನೀವು ಬರಿಸಿದ ಭವಾಂತರದಲ್ಲಿ ನಾನು ಬರುತಿರ್ದೆನಯ್ಯಾ.