ನಿಃಕಲ ಶಿವನ ಮಧ್ಯದಲ್ಲಿ ಚಿಚ್ಛಕ್ತಿ ಉದಯಿಸಿದಳು.
ಆ ಚಿಚ್ಛಕ್ತಿಯ ಮಧ್ಯದಲ್ಲಿ ಶಾಂತ್ಯತೀತೋತ್ತರೆಯೆಂಬ ಕಲೆ.
ಆ ಶಾಂತ್ಯತೀತೋತ್ತರೆಯೆಂಬ ಕಲೆಯ ಮಧ್ಯದಲ್ಲಿ ಮಹಾಲಿಂಗ.
ಆತ ಮಹಾಲಿಂಗದ ಮಧ್ಯದಲ್ಲಿ ನಿರ್ಮುಕ್ತಸಾದಾಖ್ಯ.
ಆ ನಿರ್ಮುಕ್ತಸಾದಾಖ್ಯದ ಮಧ್ಯದಲ್ಲಿ
ಪಶುಪತಿಯೆಂಬ ಕಲಾಮೂರ್ತಿ.
ಆ ಪಶುಪತಿಯೆಂಬ ಕಲಾಮೂರ್ತಿಯ ಮಧ್ಯದಲ್ಲಿ ಶಿವನೆಂಬ ಐಕ್ಯ.
ಆ ಐಕ್ಯ ಮಧ್ಯದಲ್ಲಿ ಉಪಮಾತೀತನು.
ಆ ಉಪಮಾತೀತನ ಮಧ್ಯದಲ್ಲಿ ಆತ್ಮನು.
ಇಂತು ಮಹಾಸಾದಾಖ್ಯದ ಸೃಷ್ಟಿ.
ಆ ಸಕಲ ಶಿವನ ಮಧ್ಯದಲ್ಲಿ ಪರಾಶಕ್ತಿ;
ಆ ಪರಶಕ್ತಿಯ ಮಧ್ಯದಲ್ಲಿ ಶಾಂತ್ಯಾತೀತೆಯೆಂಬ ಕಲೆ.
ಆ ಶಾಂತ್ಯಾತೀತೆಯೆಂಬ ಕಲೆಯ ಮಧ್ಯದಲ್ಲಿ ಪ್ರಸಾದಲಿಂಗ.
ಆ ಪ್ರಸಾದಲಿಂಗದ ಮಧ್ಯದಲ್ಲಿ ಶಿವಸಾದಾಖ್ಯ.
ಆ ಶಿವಸಾದಾಖ್ಯದ ಮಧ್ಯದಲ್ಲಿ ಮಹಾದೇವನೆಂಬ ಕಲಾಮೂರ್ತಿ.
ಆ ಮಹಾದೇವನೆಂಬ ಕಲಾಮೂರ್ತಿಯ ಮಧ್ಯದಲ್ಲಿ
ಕ್ಷೇತ್ರಜ್ಞನೆಂಬ ಶರಣ.
ಆ ಶರಣನ ಮಧ್ಯದಲ್ಲಿ ಸದಾಶಿವನು.
ಆ ಸದಾಶಿವನ ಮಧ್ಯದಲ್ಲಿ ಆಕಾಶ-
ಇಂತು ಶಿವಸಾದಾಖ್ಯದ ಸೃಷ್ಟಿ.
ಆ ನಿಃಕಲ ಶಿವನ ಮಧ್ಯದಲ್ಲಿ ಆದಿಶಕ್ತಿ.
ಆ ಆದಿಶಕ್ತಿಯ ಮಧ್ಯದಲ್ಲಿ ಶಾಂತಿಯೆಂಬ ಕಲೆ.
ಆ ಶಾಂತಿಯೆಂಬ ಕಲೆಯ ಮಧ್ಯದಲ್ಲಿ ಜಂಗಮಲಿಂಗ.
ಆ ಜಂಗಮಲಿಂಗದ ಮಧ್ಯದಲ್ಲಿ ಅಮೂರ್ತಿಸಾದಾಖ್ಯ.
ಆ ಅಮೂರ್ತಿಸಾದಾಖ್ಯದ ಮಧ್ಯದಲ್ಲಿ
ಭೀಮೇಶ್ವರನೆಂಬ ಕಲಾಮೂರ್ತಿ.
ಆ ಭೀಮೇಶ್ವರನೆಂಬ ಕಲಾಮೂರ್ತಿಯ ಮಧ್ಯದಲ್ಲಿ
ಕರ್ತಾರನೆಂಬ ಪ್ರಾಣಲಿಂಗಿ.
ಆ ಕರ್ತಾರನೆಂಬ ಪ್ರಾಣಲಿಂಗಿಯ ಮಧ್ಯದಲ್ಲಿ ಈಶ್ವರ.
ಆ ಈಶ್ವರನ ಮಧ್ಯದಲ್ಲಿ ವಾಯು.
ಇಂತು ಅಮೂರ್ತಿಸಾದಾಖ್ಯದ ಸೃಷ್ಟಿ.
ಆ ನಿಃಕಲ ಶಿವನ ಮಧ್ಯದಲ್ಲಿ ಇಚ್ಛಾಶಕ್ತಿ.
ಆ ಇಚ್ಛಾಶಕ್ತಿಯ ಮಧ್ಯದಲ್ಲಿ ವಿದ್ಯೆಯೆಂಬ ಕಲೆ.
ಆ ವಿದ್ಯೆಯೆಂಬ ಕಲೆಯ ಮಧ್ಯದಲ್ಲಿ ಶಿವಲಿಂಗ.
ಆ ಶಿವಲಿಂಗದ ಮಧ್ಯದಲ್ಲಿ ಮೂರ್ತಿಸಾದಾಖ್ಯ.
ಆ ಮೂರ್ತಿಸಾದಾಖ್ಯದ ಮಧ್ಯದಲ್ಲಿ
ಮಹಾರುದ್ರನೆಂಬ ಕಲಾಮೂರ್ತಿ.
ಆ ಮಹಾರುದ್ರನೆಂಬ ಕಲಾಮೂರ್ತಿಯ ಮಧ್ಯದಲ್ಲಿ
ಭಾವನೆಂಬ ಪ್ರಸಾದಿ.
ಆ ಭಾವನೆಂಬ ಪ್ರಸಾದಿಯ ಮಧ್ಯದಲ್ಲಿ ರುದ್ರನು.
ಆ ರುದ್ರನ ಮಧ್ಯದಲ್ಲಿ ಅಗ್ನಿ.
ಇಂತು ಮೂರ್ತಿಸಾದಾಖ್ಯದ ಸೃಷ್ಟಿ.
ಆ ನಿಃಕಲ ಶಿವನ ಮಧ್ಯದಲ್ಲಿ ಪ್ರತಿಷ್ಠೆಯೆಂಬ ಕಲೆ.
ಆ ಪ್ರತಿಷ್ಠೆಯೆಂಬ ಕಲೆಯ ಮಧ್ಯದಲ್ಲಿ ಗುರುಲಿಂಗ.
ಆ ಗುರುಲಿಂಗದ ಮಧ್ಯದಲ್ಲಿ ಕರ್ತೃಸಾದಾಖ್ಯ.
ಆ ಕರ್ತೃಸಾದಾಖ್ಯದ ಮಧ್ಯದಲ್ಲಿ ಸರ್ವನೆಂಬ ಕಲಾಮೂರ್ತಿ.
ಆ ಸರ್ವನೆಂಬ ಕಲಾಮೂರ್ತಿಯ ಮಧ್ಯದಲ್ಲಿ
ಚೈತನ್ಯವೆಂಬ ಮಾಹೇಶ್ವರ.
ಆ ಚೈತನ್ಯನೆಂಬ ಮಾಹೇಶ್ವರನ ಮಧ್ಯದಲ್ಲಿ ವಿಷ್ಣು.
ಆ ವಿಷ್ಣುವಿನ ಮಧ್ಯದಲ್ಲಿ ಅಪ್ಪು.
ಇಂತು ಕರ್ತೃಸಾದಾಖ್ಯದ ಸೃಷ್ಟಿ.
ಆ ನಿಃಕಲ ಶಿವನ ಮಧ್ಯದಲ್ಲಿ ಕ್ರಿಯಾಶಕ್ತಿ.
ಆ ಕ್ರಿಯಾಶಕ್ತಿಯ ಮಧ್ಯದಲ್ಲಿ ನಿವೃತ್ತಿಯೆಂಬ ಕಲೆ.
ಆ ನಿವೃತ್ತಿಯೆಂಬ ಕಲೆಯ ಮಧ್ಯದಲ್ಲಿ ಆಚಾರಲಿಂಗ.
ಆ ಆಚಾರಲಿಂಗದ ಮಧ್ಯದಲ್ಲಿ ಕರ್ಮಸಾದಾಖ್ಯ.
ಆ ಕರ್ಮಸಾದಾಖ್ಯದ ಮಧ್ಯದಲ್ಲಿ ಭವನೆಂಬ ಕಲಾಮೂರ್ತಿ.
ಆ ಭವನೆಂಬ ಕಲಾಮೂರ್ತಿಯ ಮಧ್ಯದಲ್ಲಿ
ಅಂತರಾಮಿಯೆಂಬ ಭಕ್ತ.
ಆ ಅಂತರಾಮಿಯೆಂಬ ಭಕ್ತನ ಮಧ್ಯದಲ್ಲಿ ಬ್ರಹ್ಮ.
ಆ ಬ್ರಹ್ಮನ ಮಧ್ಯದಲ್ಲಿ ಪೃಥ್ವಿ.
ಆ ಬ್ರಹ್ಮನಿಂದ ನರರು ಸುರರು ಅಸುರರು
ಅಂಡಜ ಸ್ವೇದಜ ಉದ್ಭಿಜ ಜರಾಯುಜವೆಂಬ
ಸಕಲ ಚರಾಚರಂಗಳೆಲ್ಲವೂ ಹುಟ್ಟಿದವು.
ಇಂತಿವೆಲ್ಲವು ಶಿವನ ನೆನಹುಮಾತ್ರದಿಂದಲಾದವಯ್ಯ,
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.