Index   ವಚನ - 234    Search  
 
ಜಡಶೀಲಗಳ ಹೊತ್ತು ಕೆಡುವೊಡಲಹೊರೆವ ತುಡುಗುಣಿಗಳಾಚಾರಕ್ಕಗಣಿತ ನೋಡಾ ನಮ್ಮ ವೀರಮಾಹೇಶ್ವರನು. ಮನದಿಚ್ಫೆಗನುವಾದ ತನುಸುಖಪದಾರ್ಥವನು ದಿನದಿನಕ್ಕೆ ವ್ರತವೆಂದು ತಿನಬಂದ ಶುನಕನಲ್ಲ ನೋಡಾ ನಮ್ಮ ವೀರಮಾಹೇಶ್ವರನು. ಮುಟ್ಟುತಟ್ಟುಗಳಿಂದೆ ಕೆಟ್ಟೆನಲ್ಲಾಯೆಂದು ಕಟ್ಟುಕಾವಲಿಗೊಂಡು ಕೆಟ್ಟಸಿಟ್ಟುಗಳಿಂದೆ ಬಟ್ಟೆಯನು ಹಿಡಿವ ಪಟ್ಟುಗುಡುವನಂತಲ್ಲ ನೋಡಾ ನಮ್ಮ ವೀರಮಾಹೇಶ್ವರನು. ಮತ್ತೆಂತೆಂದೊಡೆ : ಪರಧನ ಪರಸತಿ ಪರಹಿಂಸೆ ಪರನಿಂದೆ ಪರದೈವ ಪರಸಮಯಾದಿ ದುರಾಸೆವಿಡಿದು ನಡೆಯದಿಹುದೇ ಶೀಲ ನೋಡಾ ನಮ್ಮ ವೀರಮಾಹೇಶ್ವರಂಗೆ. ತನು ಮನ ಪ್ರಾಣಾದಿ ಸಕಲ ಕರಣಾದಿ ಗುಣವಳಿದು ಗುರುನಿರಂಜನ ಚನ್ನಬಸವಲಿಂಗನ ನೆನಹು ಬಿಡದಿಹುದೇ ವ್ರತ ನೋಡಾ ನಮ್ಮ ವೀರಮಾಹೇಶ್ವರಂಗೆ.