Index   ವಚನ - 9    Search  
 
ಬಸವಣ್ಣಾ, ನೀವು ಮರ್ತ್ಯಕ್ಕೆ ಬಂದು ನಿಂದಡೆ ಭಕ್ತಿಯ ಬೆಳವಿಗೆ ದೆಸೆದೆಸೆಗೆಲ್ಲಾ ಪಸರಿಸಿತ್ತಲ್ಲಾ! ಅಯ್ಯಾ! ಸ್ವರ್ಗ ಮರ್ತ್ಯ ಪಾತಾಳದೊಳಗೆಲ್ಲಾ ನಿಮ್ಮ ಭಕ್ತಿಯ ಬೆಳವಿಗೆಯ ಘನವನಾರು ಬಲ್ಲರು? ಅಣ್ಣಾ, ಶಶಿಧರನಟ್ಟಿದ ಮಣಿಹ ಪೂರೈಸಿತ್ತೆಂದು ನೀವು ಲಿಂಗೈಕ್ಯವಾದೊಡೆ, ನಿಮ್ಮೊಡನೆ ಭಕ್ತಿ ಹೋಯಿತ್ತಯ್ಯಾ. ನಿಮ್ಮೊಡನೆ ಅಸಂಖ್ಯಾತ ಮಹಾಗಣಂಗಳು ಹೋದರಣ್ಣಾ. ಮರ್ತ್ಯಲೋಕದ ಮಹಾಮನೆ ಶೂನ್ಯವಾಯಿತ್ತಲ್ಲಾ ಬಸವಣ್ಣಾ. ಎನ್ನನೊಯ್ಯದೆ ಹೋದೆಯಲ್ಲಾ ಪಂಚಪರುಷಮೂರ್ತಿ ಬಸವಣ್ಣಾ. ಬಸವಣ್ಣಪ್ರಿಯ ಚೆನ್ನಸಂಗಯ್ಯಂಗೆ ಪ್ರಾಣಲಿಂಗವಾಗಿ ಹೋದೆಯ ಸಂಗನಬಸವಣ್ಣಾ.