Index   ವಚನ - 109    Search  
 
ಕೂಡಿದ ಧನವೆಲ್ಲವನು ಗುರುಲಿಂಗಜಂಗಮಕ್ಕೆ ವಂಚನೆಯ ಮಾಡಿ ಒಳಗಿಟ್ಟುಕೊಂಡು, ನೆಲನ ತೋಡಿ ಬಚ್ಚಿಟ್ಟುಕೊಂಡು. ಹಲವು ತೆರದ ಆಭರಣಂಗಳ ಮಾಡಿಸಿ, ಕರ ಚರಣ ಉರ ಕರ್ಣಂಗಳೊಳಗಿಟ್ಟುಕೊಂಡು, ಮತ್ತಿಷ್ಟು ಬದುಕಾಗಲೆಂದು ತನ್ನ ಕೈಯೊಳಗಿನ ಇಷ್ಟಲಿಂಗಕ್ಕೆ ಅಷ್ಟವಿಧಾರ್ಚನೆಯಂ ಮಾಡುವ ಲಿಂಗಪೂಜಕನ ಪರಿ ಎಂತೆಂದೊಡೆ; ಆ ಭಕ್ತನು ಪಂಚಾಭಿಷೇಕದಿಂದ ಲಿಂಗಕ್ಕೆ ಮಜ್ಜನವ ನೀಡಿದಡೆ ಲಿಂಗದ ಚಿತ್ತದಲ್ಲಿ ಸುಣ್ಣ ನೀರನೆತ್ತಿ ಬಾಧಿಸಿದಂತಾಯಿತ್ತಯ್ಯಾ! ಆ ಭಕ್ತನು ವಿಭೂತಿಯ ಧರಿಸಿದಡೆ ಲಿಂಗದ ಚಿತ್ತದಲ್ಲಿ ಬೂದಿಯ ಬೊಕ್ಕಣವ ಕಟ್ಟಿ ಬಾಧಿಸಿದಂತಾಯಿತ್ತಯ್ಯಾ! ಆ ಭಕ್ತನು ಗಂಧವ ಧರಿಸಿದರೆ ಲಿಂಗದ ಚಿತ್ತದಲ್ಲಿ ಚಂಡಿಟ್ಟು ಬಾಧಿಸಿದಂತಾಯಿತ್ತಯ್ಯಾ! ಆ ಭಕ್ತನು ಅಕ್ಷತೆಯನೇರಿಸಿದರೆ ಲಿಂಗದ ಚಿತ್ತದಲ್ಲಿ ಕಲ್ಲು ಹೊರಿಸಿ ಬಾಧಿಸಿದಂತಾಯಿತ್ತಯ್ಯಾ! ಆ ಭಕ್ತನು ಪುಷ್ಪವ ಧರಿಸಿದರೆ ಲಿಂಗದ ಚಿತ್ತದಲ್ಲಿ ಬೆನ್ನ ಮೇಲೆ ಹೇರು ಹೊರಿಸಿದಂತಾಯಿತ್ತಯ್ಯಾ! ಆ ಭಕ್ತನು ಧೂಪವ ಬೀಸಿದರೆ ಲಿಂಗದ ಚಿತ್ತದಲ್ಲಿ ಅರವನಿಕ್ಕಿ ಬಾಧಿಸಿದಂತಾಯಿತ್ತಯ್ಯಾ! ಆ ಭಕ್ತನು ದೀಪಾರತಿಯನೆತ್ತಿದರೆ ಲಿಂಗದ ಚಿತ್ತದಲ್ಲಿ ಪಂಜುಗಳ್ಳರು ಬಂದು ಮೋರೆಯ ಸುಟ್ಟು ಬಾ[ಧಿ]ಸಿದಂತಾಯಿತ್ತಯ್ಯಾ! ಆ ಭಕ್ತನು ಸ್ತೋತ್ರಮಂತ್ರವ ನುಡಿದರೆ ಲಿಂಗದ ಚಿತ್ತದಲ್ಲಿ ಕರ್ಣದೊಳಗೆ ತೊಣಚಿ ಹೊಕ್ಕು ಗೋಳಿಟ್ಟು ಬಾಧಿಸಿದಂತಾಯಿತಯ್ಯಾ! ಇಂತಪ್ಪ ಲಿಂಗಬಾಧಕರನು ಲಿಂಗಪೂಜಕರೆನಬಹುದೆ? ಆತನ ಅಂಗಳವ ಮೆಟ್ಟಬಹುದೆ? ಇದರ ಹಿಂಗಿತವ ನಿಜಭಾವವುಳ್ಳ ಶರಣರು ನೀವೇ ತಿಳಿದು ನೋಡಿರೆಂದಾತ ನಮ್ಮ ಅಂಬಿಗರ ಚೌಡಯ್ಯ.