ನಿರವಯಸ್ಥಲದಲ್ಲಿ ನಿಂದ ಬಳಿಕ
ಹೊನ್ನ ಹಿಡಿಯೆನೆಂಬ ಭಾಷೆ ಎನಗೆ.
ಹೆಣ್ಣು ಹೊನ್ನು ಮಣ್ಣು ಹಿಡಿದು ಲಿಂಗೈಕ್ಯನಾದೆನೆಂದಡೆ
ಎನ್ನ ಅಂಗದ ಮೇಲೆ ಲಿಂಗವಿಲ್ಲ.
ಪಟ್ಟೆಮಂಚ ಹಚ್ಚಡ ಬಂದಡೆ ದಿಟ್ಟಿಸಿ ನೋಡೆ.
ಸಣ್ಣ ಬಣ್ಣಗಳು ಬಂದಡೆ
ಕಣ್ಣೆತ್ತಿ ನೋಡೆನೆಂಬ ಭಾಷೆ ಎನಗೆ.
ಎನ್ನ ಲಿಂಗಕ್ಕೆ ಸೆಜ್ಜೆ ಶಿವದಾರವ ಬಾಯೆತ್ತಿ
ಭಕ್ತ ಜಂಗಮವ ಬೇಡಿದೆನಾದಡೆ,
ಎನ್ನ ಅರುವಿಂಗೆ ಭಂಗ ನೋಡಾ.
ಬಸವಣ್ಣ ಸಾಕ್ಷಿಯಾಗಿ, ಪ್ರಭುವಿಗರಿಕೆಯಾಗಿ.
ಪ್ರಭುದೇವರ ಕಂಡು ಕೈಯಲ್ಲಿ ಕಟ್ಟಿದ
ಬಿರಿದಿಂಗೆ ಹಿಂದೆಗೆದೆನಾದಡೆ
ಎನಗೆ ಗುರುವಿಲ್ಲ ಲಿಂಗವಿಲ್ಲ ಜಂಗಮವಿಲ್ಲ,
ಪಾದೋದಕ ಪ್ರಸಾದವೆಂಬುದು ಎಂದೆಂದಿಗೂ ಇಲ್ಲ.
ಅಮುಗೇಶ್ವರನೆಂಬ ಲಿಂಗವು ಸ್ವಪ್ನದಲ್ಲಿ ಸುಳಿಯಲಿಲ್ಲ.