Index   ವಚನ - 14    Search  
 
ತಂದೆಯ ವಿಕಾರದಿಂದ ತಾಯಿಯ ಬಸುರಲ್ಲಿ ಬಂದು, ತಂದೆಯದು ಒಂದು ದಿನದ ಶುಕ್ಲ, ತಾಯಿಯದು ಒಂಬತ್ತು ತಿಂಗಳದ ಶೋಣಿತವು ಕೂಡಿ, ಗಟ್ಟಿಗೊಂಡು ಪಿಂಡವಾದ ಈ ಶರೀರದ ಕಷ್ಟ ಎಷ್ಟಂತ್ಹೇಳಲಿ, ಆ ತಾಯಿಯ ಉದರದಲ್ಲಿರ್ದ ಆ ಪರಿಯೆಂತೆಂದರೆ: ಕದ್ದ ಕಳ್ಳನ ಹೆಡಗುಡಿಯಕಟ್ಟಿ ಹೊಗಸಿದ ಸೆರೆಮನೆಗಿಂತ ಸಹಸ್ರ ಇಮ್ಮಡಿ ಉಪದ್ರವಾಯಿತು. ಎಡಬಲ ಮೂತ್ರದ ಹಡಕಿಯ ಬಾಧೆ, ನಡುವೆ ಕಡಿವ ಜಂತುಗಳ ಬಾಧೆ, ಕುದಿವ ಜಠರಾಗ್ನಿಯ ಬಾಧೆ, ಏರಿಳಿವ ಶ್ವಾಸಮಾರುತನ ಬಾಧೆ, ಹೆತ್ತವ್ವ ನುಂಗಿದ ತುತ್ತು ಅಳನೆತ್ತಿಗೆ ತಗಲಲು ಹತ್ತುಸಾವಿರ ಸಿಡಿಲು ಹೊಡೆದಂತಾಯಿತು. ಮೇಲೆ ಕುಡಿವ ನೀರಿನಿಂದಾದ ಸಂಕಟ ಹೇಳಲಳವಲ್ಲ. ಆ ತಾಯಿ ನಡಿವ ನುಡಿವ ಆಡುವ ಹಾಡುವ ಓಡುವ ಕೂಡ್ರುವ ಆಕಳಿಸುವ ಮಲಗುವ ಏಳುವ ಬೀಳುವ ಮೈಮುರಿಯುವ ಇಂತು ಅನಂತ ಬಾಧೆಯೊಳಗೆ ಸಾಯದ ಕಾರಣವೇನು? ಕರ್ಮನಿವೃತ್ತಿ ಇಲ್ಲದಾಗಿ. ಇಂತು ದುಃಖದಲ್ಲಿ ಒಂಬತ್ತುತಿಂಗಳು ತುಂಬಿ ಸರ್ವ ಅವಯವಂಗಳ ಬಲಿದು ಎಚ್ಚರಹುಟ್ಟಿ ಜಾತಿಸ್ಮರತ್ವವ ತಿಳಿದು, ಕೆಟ್ಟೆ ಕೆಟ್ಟೆನೆಂದು ತನ್ನ ಮುನ್ನಿನ ಕರ್ಮಕ್ಕೆ ನಡುನಡುಗಿ ಕಡೆಗಾಣುವ ಪರಿಯೆಂತೆಂದು ಚಿಂತಿಸಿ, ಸರ್ವರಿಗೆ ಶಿವನೇ ದೈವವೆಂದು ಸರ್ವರ ಪಾಪಪೊರೆವಾತನೆಂದು ತಿಳಿದು, ಈ ಭವಬಾಧೆ ಬಿಡಿಸಿಕೊಳ್ಳುವುದಕ್ಕೆ ಶಿವಧೋ ಶಿವಧೋ ಶಿವಧೋ ಎಂದು ಮೊರೆಯಿಡುವ ಸಮಯಕ್ಕೆ ವಿಷ್ಣು ಪ್ರಸೂತಿಯ ಗಾಳಿಬೀಸಲು ತಲೆಮೇಲಾಗಿದ್ದ ಶಿಶುವು, ಅಗಸ ಅರವಿಯ ಹಿಂಡಿದಂತೆ, ಹೆಡಕ್ಹಿಡಿದು ಮುರಿದೊತ್ತಿ ತಲೆಕೆಳಗೆ ಮಾಡಿ ಯೋನಿದ್ವಾರದಾ ಹೊರಯಕ್ಕೆ ನೂಕಲು, ಅಕ್ಕಸಾಲಿಗನು ಕಂಬೆಚ್ಚಿನಲ್ಲಿಕ್ಕಿ ತೆಗೆದ ಚಿನ್ನದ ಸಲಾಕೆಯಂತಾಯಿತಲ್ಲಾ. ಮುಂದೆ ಭೂಸ್ಪರ್ಶನದಿಂದೆ ಹಿಂದಿನ ಜಾತಿಸ್ಮರತ್ವವ ಮರೆತು, ತನ್ನ ಮಲಮೂತ್ರದಲ್ಲಿ ತಾನೆ ಹೊರಳ್ಯಾಡಿ, ಅನಂತದುಃಖವಂ ಬಡೆದು, ಬಾಲತ್ವನೀಗಿ ಯವ್ವನಬರಲು, ತಾನು ಹ್ಯಾಂಗಾದೆನೆಂದು ತಿಳಿಯದೆ ತಾ ಹಿಂದೆ ಬಂದ ಮೂತ್ರದ ಕುಣಿಗೆ ಮನವಿಟ್ಟು ಬಾಯಿದೆರೆದು ಕುದಿಕುದಿದು ಕಿಸುಕುಳದ ಕೀವು ರಕ್ತವೊಸರುವ ಹಸಿ ಘಾಯಿ ಹಳದೊಗಲಿಗೆ ಸೋತು ಮುಪ್ಪಾಗಿ ಕೆಮ್ಮು ಕ್ಯಾಕರಿಕೆ ವಾತ ಪಿತ್ಥ ಶ್ಲೇಷ್ಮಾದಿ ಅನಂತ ರೋಗಾದಿಗಳಿಂದ ಸತ್ತು ಸತ್ತು ಹೋಯಿತು ಅನಂತಕಾಲ ಅನಂತಜನ್ಮ, ನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ.