ನಿಃಕಳ ನಿರುಪಮ ತೇಜೋಮಯ ನಿರಂಜನಲಿಂಗದ ನೆನಹಿನ
ಮಹಾಘನ ಮಹತ್ವವನುಳ್ಳ ಮಹಾಂತ
ಅಖಂಡಪರಶಿವನೊಳಗೆ
ಷಡ್‌ವಕ್ತ್ರವನುಳ್ಳ ಪರಬ್ರಹ್ಮವಿರ್ಪುದು,
ಆ ಪರಬ್ರಹ್ಮದಲ್ಲಿ ಬ್ರಹ್ಮಾಂಡವಿರ್ಪುದು,
ಆ ಬ್ರಹ್ಮಾಂಡದೊಳಗೆ ಸಕಲ ಸ್ಥಿರಚರಪ್ರಾಣಿಗಳಿರ್ಪುವು.
ಆ ಪ್ರಾಣಿಗಳ ಸತ್ಕರ್ಮ ದುಷ್ಕರ್ಮದಿಂದಾದ
ಪುಣ್ಯ ಪಾಪಂಗಳಿಂದೆ ಬಂದ
ಸುಖದುಃಖಂಗಳನುಂಡು ಸೃಷ್ಟಿ ಸ್ಥಿತಿ ಲಯಕ್ಕೊಳಗಾಗಿ
ಅನಂತಕಾಲ ಎಂಬತ್ತುನಾಲ್ಕುಲಕ್ಷ
ಜೀವರಾಶಿಯೋನಿಯಲ್ಲಿ ಬರುತಿರ್ಪುದು.
ಆ ಬರುವದರೊಳಗೆ ಸತ್ಕರ್ಮದಿಂದ ಪುಣ್ಯವೊದಗಿ
ಮಾನವಜನ್ಮ ಬರಲು
ಈ ಮಾನವಜನ್ಮದ ಅಜ್ಞಾನಕ್ಕೆ
ಆ ಮಹಾಮಹಾಂತ ಪರಿಮಳವನೊಳಕೊಂಡು
ಮಹಾಂತಮಾರುತ ಸುಳಿಯಲು
ಆ ಮಾರುತನ ಸೋಂಕಿಗೆ ಆ ಅಜ್ಞಾನ ಸುಜ್ಞಾನವಾಯಿತ್ತು.
ಆ ಸುಜ್ಞಾನದಿಂದೆ ಸತ್ಕರ್ಮವ ಮಾಡಲು
ಸಾಧುರಸಂಗವು ದೊರಕಿತ್ತು.
ಆ ಸಾಧುರಸಂಗದಿಂದ ಸುಗುಣ ಅಳವಟ್ಟಿತ್ತು.
ಆ ಸುಗುಣ ಅಳವಟ್ಟಲ್ಲಿ ಸಂಸಾರ ಹೇಯವಾಯಿತ್ತು.
ಆ ಸಂಸಾರ ಹೇಯವಾದಲ್ಲಿ
ಮುಕ್ತನಾಗಬೇಕೆಂಬೋ ಚಿಂತೆ ತಲೆದೋರಿತ್ತು.
ಆ ಚಿಂತಾಪರವಶದಿಂದೆ ದುಃಖಗೊಂಡಿರಲು
ಆ ಮಹಾಂತಪರಿಮಳವನೊಳಕೊಂಡು,
ಮಹಾಂತಮಾರುತನೆಂಬ ಪ್ರಭುವೇ ತಾ ಮುನ್ನ ಸೋಂಕಿದ್ದಕ್ಕೆ
ತನ್ನ ಬಯಸುವ ಶಿಷ್ಯನಲ್ಲಿಗೆ ತಾನೇ ಗುರುವಾಗಿ ಬಂದು,
ಮೋಕ್ಷವಾಸನಿಗೆ ಅವಸ್ಥೆಯೊಳಗಿದ್ದ ಶಿಷ್ಯನ ಸಂತೈಸಿ,
ಮಹಾಂತಪರಿಮಳವನುಳ್ಳ ಮುಕ್ತಿಫಲವಾಗುವ
ಘನವೆಂಬ ಪುಷ್ಪಕ್ಕೆ ಮೂಲನೆನವಾದ ಮನವೆಂಬ ಲಿಂಗದಲ್ಲಿ
ನಿಃಕಲವೇ ನಾನು, ನಾನೇ ನೀನು.
ಹೀಗೆಂಬುವುದ ಉಸುರದೆ ಮರೆಗೈದು,
ಆ ಲಿಂಗಮಂ ಪರಿಪೂರ್ಣವಾದ ಕರಕಮಲಕ್ಕೆ ಕೊಟ್ಟು
ಮನವೆಂಬ ಲಿಂಗದ ನೆನವೆಂಬ ಬಳ್ಳಿಯೇ ಜಂಗಮವೆಂದು ತೋರಿ,
ಆ ಬಳ್ಳಿಯ ಬೊಡ್ಡಿಯ ತಂಪು ಪಾದೋದಕವು.
ಆ ಆನಂದ ತಂಪ್ಹಿಡಿಯುವುದಕ್ಕೆ
ಮಡಿಯಾದ ಮೃತ್ತಿಕೆಯು ನಿರಂಜನಪ್ರಸಾದ.
ಆ ಮೃತ್ತಿಕೆಗೆ ಒಡ್ಡಾದ ತೇಜೋಮಯವೇ ವಿಭೂತಿ,
ಆ ತೇಜಸ್ಸು ಲಿಂಗಪೂಜೆಯೇ ರುದ್ರಾಕ್ಷಿ,
ಆ ತೇಜಸ್ಸು ಲಿಂಗಸ್ಫುಟನಾದವೇ ನಿರುಪಮಮಂತ್ರ,
ಇಂತೀ ಅಷ್ಟಾವರಣ ಘಟ್ಟಿಗೊಂಡು ಪೂಜಿಸಲಾಗಿ
ಆ ಶಿಷ್ಯನು ಗುರುವ ಹಾಡಿ, ಲಿಂಗವ ನೋಡಿ,
ಜಂಗಮವ ಪೂಜಿಸಿ, ಪಾದೋದಕವನ್ನುಪಾರ್ಜಿಸಿ,
ಪ್ರಸಾದವನುಂಡು, ವಿಭೂತಿಯ ಲೇಪಿಸಿಕೊಂಡು,
ರುದ್ರಾಕ್ಷಿಯ ಧರಿಸಿಕೊಂಡು, ಮಂತ್ರವ ಚಿತ್ತದೊಳಿರಿಸಿ ಆಚರಿಸಲು,
ಆ ಶಿಷ್ಯನ ಕಾಯ ಆ ಗುರುವನಪ್ಪಿ ಸದ್ಗುರುವಾಯಿತ್ತು.
ಮನವು ಲಿಂಗವ ಕೂಡಿ ಘನಲಿಂಗವಾಯಿತ್ತು.
ಪ್ರಾಣ ಜಂಗಮವ ಮರೆಗೊಂಡು ನಿಜಜಂಗಮವಾಯಿತ್ತು.
ತೃಷೆ ಪಾದೋದಕದಲ್ಲಿ ಮುಳುಗಿ ಆನಂದಪಾದೋದಕವಾಯಿತ್ತು.
ಹಸಿವು ಪ್ರಸಾದದಲ್ಲಡಗಿ ಪ್ರಸಿದ್ಧಪ್ರಸಾದವಾಯಿತ್ತು.
ಚಂದನ ವಿಭೂತಿಯಲ್ಲಿ ಸತ್ತು ಚಿದ್ವಿಭೂತಿಯಾಯಿತ್ತು.
ಶೃಂಗಾರ ರುದ್ರಾಕ್ಷಿಯಲ್ಲಿ ಕರಗಿ ಏಕಮುಖರುದ್ರಾಕ್ಷಿಯಾಯಿತ್ತು.
ಚಿತ್ತ ಮಂತ್ರದಲ್ಲಿ ಸಮರಸವಾಗಿ ಮೂಲಮಂತ್ರವಾಯಿತ್ತು.
ಇಂಥಾ ಮೂಲಮಂತ್ರವೇ ಬ್ರಹ್ಮಾಂಡ, ಪಿಂಡಾಂಡ,
ಸ್ಥಿರ, ಚರ, ಸಮಸ್ತಕ್ಕೆ ಕಾರಣ ಚೈತನ್ಯಸೂತ್ರವಾಗಿ
ಅಂತರಂಗ ನಿವೇದಿಸಲು, ಅಲ್ಲಿ ಅಂತರಂಗದಲ್ಲಿ ತೋರುವ
ಆರುಸ್ಥಲ, ಆರುಚಕ್ರ, ಆರುಶಕ್ತಿ, ಆರುಭಕ್ತಿ, ಆರುಲಿಂಗ,
ಆರಾರು ಮೂತ್ತಾರು, ಇನ್ನೂರಾಹದಿನಾರು ತೋರಿಕೆಗೆ
ಆ ಮೂಲಮಂತ್ರ ತಾನೇ ಕಾರಣ ಚೈತನ್ಯಸೂತ್ರವಾಗಿ
ಕಾಣಿಸಲು ಸಮ್ಯಜ್ಞಾನವೆನಿಸಿತು.
ಆ ಸಮ್ಯಜ್ಞಾನಬೆಳಗಿನೊಳಗೆ
ಮುದ್ರೆ ಸಂಧಾನ ವಿವರ ವಿಚಾರದಿಂದೆ
ಷಟ್ತಾರೆಗಳ ಸ್ವರೂಪದ ಆರುಭೂತ, ಆರುಮುಖ,
ಆರುಹಸ್ತ, ಆರುಪ್ರಸಾದ, ಆರುತೃಪ್ತಿ, ಆರು ಅಧಿದೇವತೆ
ಮೊದಲಾದ ಆರಾರು ಮೂವತ್ತಾರು ಇನ್ನೂರಾಹದಿನಾರು
ಅನಂತ ತೋರಿಕೆಯೆಲ್ಲಾ ಮಂತ್ರಸ್ವರೂಪವೇ ಆಗಿ
ತೋರಿದಲ್ಲಿ ತತ್ವಜ್ಞಾನವಾಯಿತು.
ಒಳಗೇಕವಾದ ತತ್ವಜ್ಞಾನವು ಹೊರಗೆ ನೋಡಲು
ಹೊರಗೇಕವಾಗಿ ತೋರಿತು.
ಒಳಹೊರಗೆಂಬಲ್ಲಿ ನಡುವೆಂಬುದೊಂದು ತೋರಿತು.
ಈ ಮೂರು ಒಂದೇ ಆಗಿ, ಒಂದೇ ಬ್ಯಾರೆ ಬ್ಯಾರೆ
ಸ್ಥೂಲ ಸೂಕ್ಷ್ಮ ಕಾರಣ ಮೂರಾದಲ್ಲಿ ಆತ್ಮಜ್ಞಾನವಾಯಿತು.
ಆ ಆತ್ಮಜ್ಞಾನದಿಂದ ಆತ್ಮಾನಾತ್ಮ ವಿಚಾರ ಗಟ್ಟಿಗೊಂಡಲ್ಲಿ
ಮಹಾಜ್ಞಾನಪ್ರಕಾಶವಾಯಿತು.
ಆ ಮಹಾಜ್ಞಾನದಿಂದೆ ಅನುಭವದ ದೃಷ್ಟಿಯಿಡಲು
ಬೊಂಬೆಸೂತ್ರ ಆಡಿಸುವವನಂತೆ
ಬ್ಯಾರೆ ಬ್ಯಾರೆ ಕಾಣಿಸಲು ಈ ಬೊಂಬೆಯ ಸೂತ್ರ ಆಡಿಸುವವನು
ಇವು ಮೂರು ಎಲ್ಲಿಹವು, ಏನೆಂದು
ತೂರ್ಯವೇರಿ ಸೂರೆಗೊಂಡಲ್ಲಿ ಸ್ವಯಂಬ್ರಹ್ಮವೆನಿಸಿತ್ತು.
ಆ ಸ್ವಯಂಬ್ರಹ್ಮಜ್ಞಾನವು ತನ್ನ ತಾ ವಿಚಾರಿಸಲು
ತನ್ನೊಳಗೆ ಜಗ, ಜಗದೊಳಗೆ ತಾನು,
ತಾನೇ ಜಗ, ಜಗವೇ ತಾನೆಂಬಲ್ಲಿ ನಿಜಜ್ಞಾನವಾಯಿತು.
ಆ ನಿಜಜ್ಞಾನದಿಂದೆ ನಿಜವರಿಯಲು ಆ ನಿಜದೊಳಗೆ
ತಾನೇ ಜಗ, ಜಗದೊಳಗೆ ತಾನೇ ಎಂಬೋ ಎರಡಿಲ್ಲದೆ
ತಾನೆ ತಾನೆಂಬೊ ಅರುವಾಯಿತು.
ಆ ಅರುವು ಮರೆಗೊಂಡು ಕುರುಹು ಉಲಿಯದೆ ನಿರ್ಬೈಲಾಗಲು
ಮಹಾಂತನೆಂಬ ಹೆಸರಿಲ್ಲದೆ ಹೋಗಿ ಏನೋ ಆಯಿತ್ತು
ನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ.