ಆಯತದಲ್ಲಿ ಅಂಗಭೋಗಿಯಾಗಿರಬೇಕು.
ಸ್ವಾಯತದಲ್ಲಿ ಸನ್ನಹಿತನಾಗಿರಬೇಕು.
ಸನ್ನಹಿತದಲ್ಲಿ ಸದಾಚಾರಿಯಾಗಿರಬೇಕು.
ಇಂತೀ ತ್ರಿವಿಧದಲ್ಲಿ ಏಕವಾಗಿರಬಲ್ಲಡೆ,
ಅದು ವರ್ಮ, ಅದು ಸಂಬಂಧ, ಅದು ನಿಯತಾಚಾರವೆಂದೆಂಬೆನು.
ಅದಲ್ಲದೆ ಲಿಂಗವ ಮರೆದು, ಅಂಗ[ವ]ಭೋಗಿಸಿ,
ಅಂಗಸಂಗದಲ್ಲಿರ್ದು, ಅಂಗವೆ ಪ್ರಾಣವಾಗಿಹರಿಗೆಲ್ಲರಿಗೆಯೂ
ಲಿಂಗದ ಶುದ್ಧಿ ನಿಮಗೇಕೆ ಕೇಳಿರಣ್ಣಾ.
ಲಿಂಗವಂತನು ಅಂಗಸೂತಕಿಯಲ್ಲ.
ಅಲಗಿನ ಕೊನೆಯ ಮೊನೆಯ ಮೇಲಣ ಸಿಂಹಾಸನದ ಮೇಲೆ
ಲಿಂಗದ ಪ್ರಾಣವ ತನ್ನಲ್ಲಿ ಕೂಡಿಕೊಂಡು,
ತನ್ನ ಪ್ರಾಣವ ಲಿಂಗದಲ್ಲಿ ಕೂಡಿಕೊಂಡು,
ಏಕಪ್ರಾಣವ ಮಾಡಿಕೊಂಡಿಪ್ಪ ಶರಣನ ಜ್ಯೋತಿರ್ಮಯನೆಂಬೆನು,
ಜಗದ ಕರ್ತನೆಂಬೆನು, ಜಗದಾರಾಧ್ಯನೆಂದೆಂಬೆನು ಕಾಣಾ,
ಶುದ್ಧಸಿದ್ಧ ಪ್ರಸಿದ್ಧ ಪ್ರಸನ್ನ ಪ್ರಭುವೆ ಶಾಂತಚೆನ್ನಮಲ್ಲಿಕಾರ್ಜುನದೇವಯ್ಯಾ.
ನಿಮ್ಮ ಸಂಗಿಯ ನಿಲವಿನ ಪರಿಯ ನೀವೇ ಬಲ್ಲಿರಲ್ಲದೆ,
ನಾನೆತ್ತ ಬಲ್ಲೆನಯ್ಯಾ, ನಿಮ್ಮ ಧರ್ಮ ನಿಮ್ಮ ಧರ್ಮ ನಿಮ್ಮ ಧರ್ಮ.