ಮಹಾಶ್ರೀಗುರುವೆ ತಂದೆ, ಮಹಾಜಂಗಮವೆ ತಾಯಿ.
ಇವರಿಬ್ಬರ ಸಂಗಸಂಯೋಗದಿಂದ ನಾನು ಹುಟ್ಟಿದೆ ನೋಡಿರಯ್ಯಾ.
ಸರ್ವಾಂಗಸಾಹಿತ್ಯ ನಾನು ಹುಟ್ಟಿದ ಬಳಿಕ.
ತಂದೆ ತಾಯಿಗಳಿಬ್ಬರು ಲಿಂಗವೆಂಬ ಹೆಣ್ಣ ತಂದು,
ಎನ್ನ ಕೊರಳಲ್ಲಿ ಕಟ್ಟಿ ಮದುವೆಯ ಮಾಡಿದರಯ್ಯಾ.
ಆ ಹೆಣ್ಣಿನ ಕೈಹಿಡಿದು ನಾನು ಬದುಕಿದೆನು.
ಆ ಹೆಣ್ಣಿನ ಸಂಯೋಗದಿಂದ ಮಗನೆಂಬ ಮಹಾಲಿಂಗ ಹುಟ್ಟಿದನಯ್ಯಾ.
ಆ ಮಗ ಹುಟ್ಟಿದ ಮುನ್ನವೆ ಎನಗೆ ಮರಣವಾಯಿತ್ತು.
ಲಿಂಗವೆಂಬ ಹೆಂಡತಿ ಮುಂಡೆಯಾದಳು.
ತಂದೆ ತಾಯಿಗಳಿವರಿಬ್ಬರೂ ನನ್ನ ಒಂದಾಗಿ ಅಡಗಿ ಹೋದರು.
ಇನ್ನು ಮುನ್ನಿನ ಪರಿ ಎಂತುಟಲ್ಲವಾಗಿ ನಾನು ಬದುಕಿದೆ ಕಾಣಾ,
ಶುದ್ಧ ಸಿದ್ಧ ಪ್ರಸಿದ್ಧ ಪ್ರಸನ್ನ ಪ್ರಭುವೆ ಶಾಂತಚನ್ನ ಮಲ್ಲಿಕಾರ್ಜುನದೇವಯ್ಯಾ.
ನಿಮ್ಮ ಶರಣರ ಕರುಣದಿಂದ ಎನ್ನ ಕರ್ಮ ನಿರ್ಮಳವಾಯಿತ್ತಯ್ಯಾ,
ನಿಮ್ಮ ಧರ್ಮ ನಿಮ್ಮ ಧರ್ಮ ನಿಮ್ಮ ಧರ್ಮ.