ವಚನ - 139     
 
ಪ್ರಣವಮಂತ್ರವ ಕರ್ಣದಲ್ಲಿ ಹೇಳಿ, ಶ್ರೀಗುರು ಶಿಷ್ಯನ ಅಂಗದ ಮೇಲೆ ಲಿಂಗಪ್ರತಿಷ್ಠೆಯ ಮಾಡಿದ ಬಳಿಕ, ಪ್ರಾಣದಲ್ಲಿ ಲಿಂಗವಿಪ್ಪುದೆಂಬ ವ್ರತಗೇಡಿಗಳ ಮಾತ ಕೇಳಲಾಗದು. ಒಳಗಿಪ್ಪನೆ ಲಿಂಗದೇವನು ಮಲ ಮೂತ್ರ ಮಾಂಸದ ಹೇಸಿಗೆಯೊಳಗೆ? ಅಲ್ಲಿ ಪ್ರಾಣವಿಪ್ಪುದಲ್ಲದೆ ಲಿಂಗವಿಪ್ಪುದೆ? ಆ ಪ್ರಾಣವ ತಂದು ತನ್ನ ಇಷ್ಟಲಿಂಗದಲ್ಲಿ ಇರಿಸಿ ನೆರೆಯ ಬಲ್ಲಡೆ, ಆತನೆ ಪ್ರಾಣಲಿಂಗಸಂಬಂಧಿ. ಅಲ್ಲದವರ ಮೆಚ್ಚುವನೆ ನಮ್ಮ ಗುಹೇಶ್ವರಲಿಂಗವು?