ವಚನ - 1509     
 
ವೇದ ದೈವವೆಂದು ನುಡಿವರು, ಶಾಸ್ತ್ರ ದೈವವೆಂದು ನುಡಿವರು, ಪುರಾಣ ದೈವವೆಂದು ನುಡಿವರು, ಕಲ್ಲು ದೈವವೆಂದು ನುಡಿವರು, ಕಾಷ್ಠ ದೈವವೆಂದು ನುಡಿವರು, ಪಂಚಲೋಹ ದೈವವೆಂದು ನುಡಿವರು, ಇವರೆಲ್ಲ ಸಕಲದಲಾದ ಸಂದೇಹವನೆ ಪೂಜಿಸಿ ಸತ್ತು ಹೋದರಲ್ಲಾ! ಸಮಸ್ತ ಪ್ರಾಣಿಗಳೂ-ತಾಯನರಿಯದ ತರ್ಕಿಗಳು, ತಂದೆಯನರಿಯದ ಸಂದೇಹಿಗಳು. ತನು ಪೃಥ್ವಿಯಿಂದಲಾಯಿತ್ತು, ಮನ ವಾಯುವಿನಿಂದಲಾಯಿತ್ತು. ಕಲ್ಲು ಕಾಷ್ಠ ಸಕಲ-ನಿಷ್ಕಲದಿಂದಲಾಯಿತ್ತು. ವಾಯುವಾಧಾರದ ಪವನಸಂಯೋಗದ ಅನಾಹತ ಚಕ್ರದಿಂದ ಮೇಲಣ ಆಜ್ಞಾಚಕ್ರದಲ್ಲಿ ನಿಂದು, ಅನಂತಕೋಟಿಬ್ರಹ್ಮಾಂಡಗಳ ಮೆಟ್ಟಿ ಕಾಯದ ಕಣ್ಣ ಮುಚ್ಚಿ, ಜ್ಞಾನದ ಕಣ್ಣ ತೆರೆದು ನೋಡಲ್ಕೆ, ಅಲ್ಲಿ ಒಂದು ನಿರಾಕಾರ ಉಂಟು. ಆ ನಿರಾಕಾರದಲ್ಲಿ ನಿಂದು ನಿರ್ಣಯಿಸಿ ನೋಡಲ್ಕೆ, ಅಲ್ಲಿ ಒಂದು ನಿಶ್ಶೂನ್ಯವುಂಟು. ಆ ನಿಶ್ಶೂನ್ಯದಲ್ಲಿ ನಿಂದು ನಿಶ್ಚಯಿಸಿ ನೋಡಲ್ಕೆ, ಕತ್ತಲೆಯಲ್ಲ ಬೆಳಗಲ್ಲ ಬಚ್ಚಬರಿಯ ಬಯಲು ಗುಹೇಶ್ವರಾ!