Index   ವಚನ - 374    Search  
 
ಜ್ಞಾನಚಕ್ರ: ಪರಮತತ್ತ್ವ ಪರಮಜ್ಞಾನ ಪರಮಾರ್ಥ ಪರಾಪರ ವಾಙ್ಮನಕ್ಕಗೋಚರ ಶಬ್ದಗಂಭೀರ ಉಪಮಾತೀತ, ಉನ್ನತ ಪರಶಿವ, ಜ್ಞಾನಜ್ಯೋತಿ ಸುಜ್ಞಾನದ ಪ್ರಭೆಯ ಬೆಳಗಿನೊಳಗೆ ಸುಳಿದಾಡುವ ಪರಮಾನಂದದ ಮಹಾಮಹಿಮಂಗೆ, ಶಿವಜ್ಞಾನವೆ ಶೃಂಗಾರ, ಮಹಾಬೆಳಗೆ ವಿಭೂತಿ, ಪಂಚಬ್ರಹ್ಮವೆ ದರ್ಶನ ಗಗನಸ್ಥಾನವೆ ಕಂಥೆ, ಆಕಾಶವೆ ಟೊಪ್ಪರ, ಅಜಾಂಡ-ಬ್ರಹ್ಮಾಂಡವೆ ಕರ್ಣಕುಂಡಲ, ಆದಿ ಆಧಾರವೆ ಕಕ್ಷಪಾಳ ಅನಾಹತವೆ ಒಡ್ಯಾಣ, ಅದ್ವೈತವೆ ಯೋಗವಟ್ಟಿಗೆ, ಅಗಮ್ಯವೆ ಯೋಗವಾವುಗೆ, ಅಚಳಿತವೆ ಖರ್ಪರ, ಅಪ್ರಾಮಣವೆ ಲಾಕುಳ, ಅವಿಚಾರವೆ ಸುಳುಹು, ಅಕಲ್ಪಿತವೆ ಭಿಕ್ಷೆ, ಕೊಂಡುದೆ ಗಮನ, ನಿಂದುದೆ ನಿವಾಸ. ನಿಶ್ಚಿಂತವೆಂಬ ಆಶ್ರಮದಲ್ಲಿ ನಿರಾಕುಳವೆಂಬ ಸಿಂಹಾಸನವನಿಕ್ಕಿ, ಗಗನಗಂಭೀರದ ಬಾವಿಯೊಳಗೆ ಅಗೋಚರದ ಅಗ್ಘಣಿಯ ತಂದು ಮಹಾಘನಪ್ರಾಣಲಿಂಗಕ್ಕೆ ಮಂಗಳದ ಬೆಳಗಿನಲ್ಲಿ ಮಜ್ಜನಕ್ಕೆರೆದು; ಬಿಂದ್ವಾಕಾಶವೆ ಗಂಧ, ಮಹದಾಕಾಶವೆ ಅಕ್ಷತೆ, ಪರಾಪರವೆ ಪತ್ರೆಪುಷ್ಪ, ನಿರ್ಮಳವೆ ಲಿಂಗಾರ್ಚನೆ, ಮಹಾಪ್ರಕಾಶವೆ ಪೂಜೆ, ನಿತ್ಯನಿರಂಜನವೆ ಧೂಪದೀಪಾರತಿ, ಸಕಲ ಭುವನಾದಿಭುವನಂಗಳೆ ಸಯದಾನ, ಆಚಾರವೆ ಅರ್ಪಿತ, ಮಹಾಸ್ಥಳವೇ ಸೀತಾಳ, ಅಖಂಡಿತವೆ ಅಡಕೆ, ಏಕೋಭಾವವೆ ಎಲೆ, ಶುದ್ಧಶಿವಾಚಾರವೆ ಸುಣ್ಣ- ವಿವೇಕ ವಿಚಾರದಿಂದ ವೀಳೆಯವನವಧರಿಸೂದು. ಮಹಾಲಿಂಗದ ಪರಿಣಾಮವೆ ಪ್ರಸಾದ, ಸಮ್ಯಕ್ ಜ್ಞಾನವೆ ಸಂತೋಷ. ಸಹಜ ನಿರಾಭಾರಿಗಳ ಮೇಳದಿಂದ, ನಿಸ್ಸೀಮದ ನಿಭ್ರಾಂತಿನ ಸುಸಂಗದಲ್ಲಿ ನಿರಾಶಾಪದವೆ ಅನುಕೂಲ, ನಿಶ್ಶಬ್ದವೆ ಅನುಭಾವ, ಅನುಪಮದ ನಿಶ್ಶೂನ್ಯವೆ ವಿಶ್ರಾಮ, ನಿರಾಕಾರವೆ ಗಮನ. ನಿರಂತರ ಪಾತಾಳ ಊರ್ಧ್ವದ ಪವನ; ತ್ರಿಭುವನಗಿರಿಯೆಂಬ ಪರ್ವತವನೇರಿ, ಕಾಯವೆಂಬ ಕದಳಿಯ ಹೊಕ್ಕು ಸುಳಿದಾಡುವ ಪರಮಾನಂದದ ಮಹಾಮಹಿಮಂಗೆ ಇಹಲೋಕವೇನು? ಪರಲೋಕವೇನು? ಅಲ್ಲಿಂದತ್ತ ಅಗಮ್ಯ ನಿರಾಳ ಪರಮಜ್ಞಾನದ ಸಿದ್ಧಿ ಮಹಾಲಿಂಗದ ಬೆಳಗು, ಗುಹೇಶ್ವರಾ, ನಿಮ್ಮ ನಿಜವನರಿದ ಮಹಾಮಹಿಮ ಶರಣಂಗೆ, ನಮೋ ನಮೋ ಎಂಬೆನು.