ವಚನ - 652     
 
ಉಪಮೆ ಉಪಮಿಸಲರಿಯದೆ ಉಪಮಾತೀತವೆನುತ್ತಿದ್ದಿತ್ತು. ಅರಿವು, ಅರಿವಿನ ಮರೆಯಲ್ಲಿರ್ದುದನರಿಯಲರಿಯದೆ, ಅರಿವು ಪರಾಪರವೆಂದು ನುಡಿಯುತ್ತಿದ್ದಿತ್ತು. ಧ್ಯಾನ ಧ್ಯಾನಿಸಲರಿಯದೆ, ಧ್ಯಾನರೂಪಾತೀತನೆಂದು, ತದ್ದ್ಯಾನಗೊಂಡಿತ್ತು. ಜ್ಞಾತೃ ಜ್ಞಾನ ಜ್ಞೇಯಕ್ಕೆ ಇನ್ನಾವ ಜ್ಞಾನವೊ? ವೇದವಿಜ್ಞಾನವೆಂದುದಾಗಿ, `ತತ್ತ್ವಮಸಿ' ವಾಕ್ಯದರ್ಥವೆಲ್ಲವೂ ಹುಸಿಯಾಗಿ ಹೋದವು. ಸಚ್ಚಿದಾನಂದವೆಂದುದಾಗಿ ದ್ವೈತಾದ್ವೈತಿಬ್ರಹ್ಮವಾದಿಗಳೆಲ್ಲರೂ ಸಂಹಾರವಾಗಿ ಹೋದರು. ಬಂದೂ ಬಾರದ, ನಿಂದ ನಿರಾಳ ಗುಹೇಶ್ವರ.