Index   ವಚನ - 14    Search  
 
ರುಚಿಯಲ್ಲಿ ಸಂಹಾರ, ಸ್ಪರುಶನದಲ್ಲಿ ಸೃಷ್ಟಿ, ರೂಪಿನಲ್ಲಿ ಸ್ಥಿತಿ, ಇಂತು ಸಂಹಾರಕ್ಕೆ ನಾದವೇ ಮೂಲವು, ಸೃಷ್ಟಿಗೆ ಬಿಂದುವೇ ಮೂಲವು, ಸ್ಥಿತಿಗೆ ಕಳೆಯೇ ಮೂಲವು. ಸೃಷ್ಟಿಗೆ ಪೃಥ್ವಿಯೇ ಆಧಾರಮಾಯಿತ್ತು; ಸ್ಥಿತಿಗೆ ಆತ್ಮನೇ ಆಧಾರಮಾಯಿತ್ತು. ಸೃಷ್ಟಿಮೂಲಮಪ್ಪ ಸ್ಪರುಶನದಲ್ಲಿ ಆನಂದವೂ ಸಂಹಾರಮೂಲಮಪ್ಪ ರುಚಿಯಲ್ಲಿ ಜ್ಞಾನವೂ ಸ್ಥಿತಿಮೂಲಮಪ್ಪ ರೂಪಿನಲ್ಲಿ ನಿಜವೂ ನೆಲೆಗೊಂಡು, ಸೃಷ್ಟಿಯೆ ಸ್ಥಿತಿಹೇತುವಾಗಿ, ಸ್ಥಿತಿಯೇ ಸಂಹಾರಹೇತುವಾಗಿ, ಸಂಹಾರವೇ ಸೃಷ್ಟಿಹೇತುವಾಗಿ, ರುಚಿಗೆ ಅಗ್ನಿಯೂ, ಸ್ಪರುಶನಕ್ಕೆ ಜಲವೂ, ರೂಪಿಗೆ ಪೃಥ್ವಿಯೂ ಕಾರಣಮಾಗಿ, ಇಂತು ಅವಸ್ತ್ರಮಾಗಿ ತಿರುಗುತ್ತಿರ್ಪ ಪರಶಿವನಾಜ್ಞಾಚಕ್ರವನ್ನು ಗುರುಮುಖದಿಂದ ವಿಚಾರಿಸಿ ತಿಳಿದ ಮಹಾಪುರುಷನು ಈ ಚಕ್ರಕ್ಕೆ ತಗಲಿರ್ಪ ಮನವೆಂಬ ಕೀಲನ್ನು ಗುರುವಿತ್ತ ಲಿಂಗವೆಂಬ ಪರಶುವಿನಿಂ ಭಾವವೆಂಬ ಹಸ್ತದಲ್ಲಿ ಪಿಡಿದು ಖಂಡಿಸಲು, ಆ ಚಕ್ರದ ಚಲನೆ ನಿಂದಿತ್ತು. ಸ್ಪರ್ಶನದಲ್ಲಿರ್ಪ ಆನಂದರಸಮಂಗಳದಲ್ಲಿ ಕೂಡಿ, ಸಂಹಾರಾಗ್ನಿಯಂ ನಂದಿಸಿತ್ತು. ಆ ಸಂಹಾರದೊಳಗಿರ್ಪ ಜ್ಞಾನಾಗ್ನಿಯು ಲಿಂಗದೊಳಗೆ ಬೆರದು, ಸೃಷ್ಟಿಸ್ಥಿತಿರೂಪಮಾದ ಪೃಥ್ವಿ ಅಪ್ಪುಗಳಂ ಸಂಹರಿಸಿತ್ತು. ಸ್ಥಿತಿಯಲ್ಲಿರ್ಪ ನಿಜಲಿಂಗದಲ್ಲಿ ನಿಜಮಾಯಿತ್ತು. ಇಂತು ಆ ಚಕ್ರವಳಿಯೆ, ಆತ್ಮಭ್ರಮೆಯಳಿದು, ಆತ್ಮವೇ ಲಿಂಗಮಾಗಿ, ಆಕಾಶವೇ ಅಂಗವಾಗಿ, ವಾಯುವೇ ಆ ಎರಡರ ಸಂಗದಲ್ಲಿ ಬೆರದು ಭೇದದೋರದಿರ್ಪುದೆ ಲಿಂಗೈಕ್ಯ ಕಾಣಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.