Index   ವಚನ - 61    Search  
 
ಅರ್ಚನೆಗೊಳಗಾಯಿತ್ತು ಲಿಂಗವೆಂಬರು, ಅದು ಹುಸಿ, ನಿಲ್ಲು. ಪೂಜನೆಗೊಳಗಾಯಿತ್ತು ಲಿಂಗವೆಂಬರು, ಅದು ಹುಸಿ, ನಿಲ್ಲು. ಇಂತೀ ಉಭಯದೊಳಗಾದ ಅಷ್ಟವಿಧಾರ್ಚನೆ, ಷೋಡಶೋಪಚಾರಕ್ಕೊಳಗಾಯಿತ್ತು ಲಿಂಗವೆಂಬರು, ಇಲ್ಲ, ಇಂತೀ ನೇಮ ಹುಸಿ, ನಿಲ್ಲು. ಇಂತೀ ನೇಮಕ್ಕೆ ಒಳಗಾದಡೆ, ಇಷ್ಟಾರ್ಥ ಕಾಮ್ಯಾರ್ಥ ಮೋಕ್ಷಾರ್ಥ, ತನಗೆ ದೃಷ್ಟದಲ್ಲಿ ಆದುದಿಲ್ಲ. [ಇಹ]ದಲ್ಲಿ ಕಾಣದೆ, ಪರದಲ್ಲಿ ಕಂಡೆನೆಂಬುದು, ಹುಸಿ, ಸಾಕು ನಿಲ್ಲು. ಕುರುಹಿನಿಂದ ಕಾಬಡೆ, ತನ್ನಿಂದಲೋ, ಕುರುಹಿನಿಂದಲೋ ? ಅರಿವಿನಿಂದಲೋ, ಕುರುಹಿನಿಂದಲೋ ? ಕುರುಹಿನಿಂದಲರಿದೆಹೆನೆಂದಡೆ, ಆ ಅರಿವಿನಿಂದ ಬೇರೊಂದು ಕಂಡೆಹೆನೆಂದಡೆ, ಕಾಣಿಸಿಕೊಂಡುದು ನೀನೋ, ನಾನೋ ? ಇಂತುಭಯವೇನೆಂದರಿಯದಿಪ್ಪುದೆ ಬೆಳಗಿನ ಕಳೆಯ ಕಾಂತಿಯೊಳಗಣ ನಿಶ್ಚಯ ತಾನಾದ ಮತ್ತೆ ಏನೂ ಎನಲಿಲ್ಲ, ಅದು ತಾನೇ. ಅದು ತಾ[ನೇನೂ] ಇಲ್ಲ, ನಿಃಕಳಂಕ ಮಲ್ಲಿಕಾರ್ಜುನಾ.