Index   ವಚನ - 361    Search  
 
ಜ್ಞಾನದಲ್ಲಿ ಸುಳಿವ ಜಂಗಮಸ್ಥಲದ ಇರವು ಹೇಂಗಿರಬೇಕೆಂದಡೆ: ಅಂಬುಧಿಯ ಕೂಡಿದ ಸಂಭೇದದಂತಿರಬೇಕು. ಮುಖ ಶಿರ ಬೋಳಾದಡೇನೊ, ಹುಸಿ ಕೊಲೆ ಕಳವು ಪಾರದ್ವಾರ ಅತಿಕಾಂಕ್ಷೆಯ ಬಿಡದನ್ನಕ್ಕರ ? ಗಡ್ಡ ಜಡೆ ಕಂಥೆ ಲಾಂಛನವ ತೊಟ್ಟಿಹ ಬಹುರೂಪರಂತೆ, ಜಗದೊಳಗೆ ಸುಳಿವ ಬದ್ಧಕತನದಲ್ಲಿ ದ್ರವ್ಯಕ್ಕೆ ಗೊಡ್ಡೆಯರನಿರಿವ ದೊಡ್ಡ ಮುದ್ರೆಯ ಕಳ್ಳರು, ತುರುಬ ಚಿಮ್ಮುರಿಗಳ ಕಟ್ಟಿ, ನಿರಿಗುರುಳ ಬಾಲೆಯರ ಮುಂದೆ ತಿರುಗುತಿಪ್ಪ ಬರಿವಾಯ ಭುಂಜಕರುಗಳು ಅರಿವುಳ್ಳವರೆಂದು ಬೀಗಿ ಬೆರೆವುತಿಪ್ಪರು. ಅರಿವಿನ ಶುದ್ಧಿಯನರಿದ ಮಹಾತ್ಮಂಗೆ ಹಲುಬಲೇತಕ್ಕಯ್ಯಾ, ಮೊಲೆಯ ಕಾಣದ ಹಸುಳೆಯಂತೆ ? ಅರಿವಿನ ಶುದ್ಧಿ ಕರಿಗೊಂಡವಂಗೆ, ನರಗುರಿಗಳ ಭವನವ ಕಾಯಲೇತಕ್ಕೆ? ಅರಿವೆ ಅಂಗವಾದ ಲಿಂಗಾಂಗಿಗೆ ಬರುಬರ ಭ್ರಾಂತರ ನೆರೆ ಸಂಗವೇತಕ್ಕೆ ? ಇದು ಕಾರಣ, ತುರುಬೆಂಬುದಿಲ್ಲ, ಜಡೆಯೆಂಬುದಿಲ್ಲ, ಬೋಳೆಂಬುದಿಲ್ಲ. ಅರುಹು ಕುರುಹಿಂಗೆ ಸಿಕ್ಕದು, ಅರಿದುದು ಕುರುಹಿಂಗೆ ಸಿಕ್ಕದು, ಅರಿದುದು ಮರೆಯಲಾಗಿ, ಮರೆದುದು ಅರಿದುದಕ್ಕೆ ಕುರುಹಿಲ್ಲವಾಗಿ, ಇಂತೀ ಸಂಚಿತ ಪ್ರಾರಬ್ಧ ಆಗಾಮಿಗೆ ಹೊರಗಾದುದು, ಜ್ಞಾನ ಜಂಗಮಸ್ಥಲ. ಹೀಂಗಲ್ಲದೆ ಗೆಲ್ಲ ಸೋಲಕ್ಕೆ ಹೋರಿ ಬಲ್ಲವರಾದೆವೆಂಬವರ ವಲ್ಲಭ ನಿಃಕಳಂಕ ಮಲ್ಲಿಕಾರ್ಜುನಲಿಂಗನವರನೊಲ್ಲನಾಗಿ.