Index   ವಚನ - 797    Search  
 
ಹೃದಯಕಮಲಮಧ್ಯದಲ್ಲಿ ಅಷ್ಟದಳ ಕಮಲವ ಮೆಟ್ಟಿಪ್ಪ ಹಂಸನ ಕಟ್ಟಬೇಕೆಂಬರು. ಈ ಹೊಟ್ಟೆಯ ಕೂಳ ಅಣ್ಣಗಳೆಲ್ಲರೂ ಕಟ್ಟಬಲ್ಲರೆ ನಿಜಹಂಸನ ? ಘಟ್ಟಘಟ್ಟವನೇರಿದ ಭೃಗು ದಧೀಚಿ ಅಗಸ್ತ್ಯ ಕಶ್ಯಪ ರೋಮಜ ಕೌಂಡಿಲ್ಯ ಚಿಪ್ಪಜ ಮುಂತಾದ ಸಪ್ತ ಋಷಿಗಳೆಲ್ಲರೊಳಗಾದ ಋಷಿಜನಂಗಳು, ಬೆಟ್ಟವನೇರಿ ಕಟ್ಟಿದುದಿಲ್ಲ. ಮತ್ತೆಯೂ ಬಟ್ಟೆಗೆ ಬಂದು ಮತ್ತರಾದರಲ್ಲದೆ, ಸುಚಿತ್ತವನರಿದುದಿಲ್ಲ. ವಿಷರುಹಕುಸುಮಜನ ಕಪಾಲವ ಹಿಡಿದಾತನ ಕೈಯಲ್ಲಿ ಗಸಣೆಗೊಳಗಾದರು. ಆತ್ಮನ ರಸಿಕವನರಿಯದೆ, ಈ ಹುಸಿಗರ ನೋಡಿ ದೆಸೆಯ ಹೊದ್ದೆನೆಂದೆ, ಪಶುಪತಿದೂರ, ನಿಃಕಳಂಕ ಮಲ್ಲಿಕಾರ್ಜುನಾ.