Index   ವಚನ - 7    Search  
 
ಅನ್ಯರು ಮಾಡಿದುದ ಮುಟ್ಟದೆ, ತನ್ನ ತಾ ಮಾಡಿಕೊಂಡು ನಡೆವುದು ಸೌಕರಿಯವಲ್ಲದೆ, ವ್ರತಕ್ಕೆ ಸಂಬಂಧವಲ್ಲ. ಅದೆಂತೆಂದಡೆ: ರಸ,ಗಂಧ, ರೂಪು, ಶಬ್ದ, ಸ್ಪರ್ಶವೆಂಬ, ಪಂಚೇಂದ್ರಿಯವ ಶುದ್ಧತೆಯ ಮಾಡಿ ಪಂಚಾಚಾರವೆಂಬುದನರಿತು, ರಸವ ರುಚಿಸುವಲ್ಲಿ ಬಹುದಕ್ಕೆ ಮುನ್ನವೆ ಭೇದವನರಿತು, ನಾಸಿಕ ವಾಸನೆಯ ಕೊಂಬಲ್ಲಿ ಸೋಂಕುವುದಕ್ಕೆ ಮುನ್ನವೆ ಸುಗುಣ ದುರ್ಗುಣವನರಿತು, ಕಾಂಬುದಕ್ಕೆ ಮುನ್ನವೆ ರೂಪ ನಿರೂಪೆಂಬುದನರಿತು, ನುಡಿಯುವುದಕ್ಕೆ ಮುನ್ನವೆ ಮೃದು ಕಷ್ಟವೆಂಬುದನರಿತು, ಮುಟ್ಟುವುದಕ್ಕೆ ಮುನ್ನವೆ ಮೃದು ಕಠಿಣವೆಂಬದನರಿತು, ಇಂತೀ ಭೇದಂಗಳಲ್ಲಿ ಅರ್ಪಿತದ ಲಕ್ಷಣವ ಕಂಡು, ದೃಷ್ಟದಿಂದ ಕಟ್ಟುಮಾಡುವುದೆ ವ್ರತ; ಆ ಗುಣ ತಪ್ಪದೆ ನಡೆವುದೆ ಆಚಾರ. ಇಂತೀ ವ್ರತಾಚಾರಂಗಳಲ್ಲಿ ಸರ್ವಶೀಲಸನ್ನದ್ಧನಾಗಿ, ಸರ್ವಮುಖ ಲಿಂಗಾವಧಾನಿಯಾಗಿ ಇಪ್ಪ ಅಂಗವೆ, ಆಚಾರವೆ ಪ್ರಾಣವಾಗಿಪ್ಪ ರಾಮೇಶ್ವರಲಿಂಗವು ತಾನೆ.