Index   ವಚನ - 78    Search  
 
ನಾನಾ ವ್ರತದ ಭಾವಂಗಳುಂಟು. ಲಕ್ಷಕ್ಕೆ ಇಕ್ಕಿಹೆನೆಂಬ ಕೃತ್ಯದವರುಂಟು. ಬಂದಡೆ ಮುಯ್ಯಾಂತು ಬಾರದಿದ್ದಡೆ ಭಕ್ತರು ಜಂಗಮವ ಆರನೂ ಕರೆಯೆನೆಂಬ ಕಟ್ಟಳೆಯವರುಂಟು. ತಮ್ಮ ಕೃತ್ಯವಲ್ಲದೆ ಮತ್ತೆ ಬಂದಡೆ ಕತ್ತಹಿಡಿದು ನೂಕುವರುಂಟು. ಗುರುಲಿಂಗಜಂಗಮದಲ್ಲಿ ತಪ್ಪಕಂಡಡೆ ಒಪ್ಪುವರುಂಟು. ಮೀರಿ ತಪ್ಪಿದಡೆ ಅರೆಯಟ್ಟಿ ಅಪ್ಪಳಿಸುವರುಂಟು. ಇಂತೀ ಶೀಲವೆಲ್ಲವು ನಾವು ಮಾಡಿಕೊಂಡ ಕೃತ್ಯದ ಭಾವಕೃತ್ಯ. ತಪ್ಪಿದಲ್ಲಿ ದೃಷ್ಟವ ಕಂಡು ಶರಣರೆಲ್ಲರು ಕೂಡಿ ತಪ್ಪ ಹೊರಿಸಿದ ಮತ್ತೆ ಆ ವ್ರತವನೊಪ್ಪಬಹುದೆ! ಕೊಪ್ಪರಿಗೆಯಲ್ಲಿ ನೀರ ಹೊಯಿದು ಅಪೇಯವ ಅಪ್ಪುವಿನಲ್ಲಿ ಕದಡಿ ಅಶುದ್ಧ ಒಪ್ಪವಿಲ್ಲವೆಂದು ಮತ್ತೆ ಕುಡಿಯಬಹುದೆ! ತಪ್ಪದ ನೇಮವನೊಪ್ಪಿ ತಪ್ಪ ಕಂಡಲ್ಲಿ ಬಿಟ್ಟು ಇಂತೀ ಉಭಯಕ್ಕೆ ತಪ್ಪದ ಗುರು ವ್ರತಾಚಾರಕ್ಕೆ ಕರ್ತನಾಗಿರಬೇಕು. ಇಂತೀ ಕಷ್ಟವ ಕಂಡು ದ್ರವ್ಯದಾಸೆಗೆ ಒಪ್ಪಿದನಾದಡೆ ಅವನೂಟ ಸತ್ತ ನಾಯಮಾಂಸ. ನಾ ತಪ್ಪಿ ನುಡಿದೆನಾದಡೆ ಎನಗೆ ಎಕ್ಕಲನರಕ. ನಾ ಕತ್ತಲೆಯೊಳಗಿದ್ದು ಅಂಜಿ ಇತ್ತ ಬಾ ಎಂಬವನಲ್ಲ. ವ್ರತ ತಪ್ಪಿದವರಿಗೆ ನಾ ಕಟ್ಟಿದ ತೊಡರು. ಎನ್ನ ಪಿಡಿದಡೆ ಕಾದುವೆ, ಕೇಳಿದಡೆ ಪೇಳುವೆ. ಎನ್ನಾಶ್ರಯದ ಮಕ್ಷಿಕ, ಮೂಷಕ, ಮಾರ್ಜಾಲ, ಗೋ ಮುಂತಾದ ದೃಷ್ಟದಲ್ಲಿ ಕಾಂಬ ಚೇತನಕ್ಕೆಲ್ಲಕ್ಕೂ ಎನ್ನ ವ್ರತದ ಕಟ್ಟು. ಇದಕ್ಕೆ ತಪ್ಪಿದೆನಾದಡೆ ನಿಮ್ಮಾಣೆ ನಿಮ್ಮ ಪ್ರಮಥರಾಣೆ. ಆಚಾರವೆ ಪ್ರಾಣವಾದ ರಾಮೇಶ್ವರಲಿಂಗವೆ ಎಚ್ಚತ್ತು ಬದುಕು.