Index   ವಚನ - 47    Search  
 
ಅಷ್ಟಭೋಗಂಗಳ ಕಾಮಿಸಿ, ತನಗೆಂಬ ಜ್ಞಾನೇಂದ್ರಿಯ ಅಂತಃಕರಣಗಳ ಮುಸುಡುಗುತ್ತಲೀಯದೆ ಸ್ವಾನುಭಾವರ ಸುಖದೊಳಗಿರಬಲ್ಲಡೆ ಕಕ್ಷಸ್ಥಲದಲ್ಲಿ ಧರಿಸುವುದಯ್ಯಾ. ಇಂದ್ರಿಯ ನಿರೂಡ್ಥೀಯ ವಿಕಳದ ಅಪೇಕ್ಷೆಯಿಂ ಕಾಂಚಾಣಕ್ಕೆ ಕೈಯಾನದೆ ನಿಚ್ಚಯ ದೃಡಚಿತ್ತದೊಳಿರಬಲ್ಲಡೆ ಕರಸ್ಥಲದಲ್ಲಿ ಧರಿಸುವುದಯ್ಯಾ. ಅಂಗನೆಯರ ಅಂಗಸುಖದ ವಿರಹಕ್ಕೆ ತನುವನೊಪ್ಪಿಸದೆ ಲಿಂಗವನಪ್ಪಿ ಪರಮಸುಖದ ಸುಗ್ಗಿಯೊಳಿರಬಲ್ಲಡೆ ಉರಸ್ಥಲದಲ್ಲಿ ಧರಿಸುವುದಯ್ಯಾ. ನಿಂದೆ ನಿಷ್ಠುರ ಅನೃತ ಅಸಹ್ಯ ಕುತರ್ಕ ಕುಶಬ್ದವಳಿದು ಶಿವಾನುಭಾವದ ಸುಖದೊಳಿರಬಲ್ಲಡೆ ಕಂಠಸ್ಥಲದಲ್ಲಿ ಧರಿಸುವುದಯ್ಯಾ. ಲಿಂಗವಿಹೀನರಾದ ಲೋಕದ ಜಡಮಾನವರಿಗೆ ತಲೆವಾಗದೆ ಶಿವಲಿಂಗಕ್ಕೆರಗಿರಬಲ್ಲಡೆ ಶಿರದಲ್ಲಿ ಧರಿಸುವುದಯ್ಯಾ. ಅಂತರ್ಮುಖವಾಗಿ ಶಿವಜ್ಞಾನದಿಂ ಪ್ರಾಣಗುಣವಳಿದು ಸದಾ ಸನ್ನಿಹಿತದಿಂದೆರಡರಿಯದಿರಬಲ್ಲಡೆ ಅಮಳೋಕ್ಯದಲ್ಲಿ ಧರಿಸುವುದಯ್ಯಾ. ಶಿವತತ್ವದ ಮೂಲಜ್ಞಾನಸಂಬಂದ್ಥಿಗಳಪ್ಪ ಶಿವಶರಣರ ಮತವಿಂತಯ್ಯಾ ಸೌರಾಷ್ಟ್ರ ಸೋಮೇಶ್ವರಾ.