Index   ವಚನ - 31    Search  
 
ಒಂದು ಎರಡಹುದೆ? ಎರಡು ಒಂದಹುದೆ? ಒಂದು ಒಂದೇ, ಎರಡು ಎರಡೇ. ಅದು ಕಾರಣ, ಶಿವನು ತನ್ನ ಲೀಲಾಕಾರಣವಾಗಿ ಮಾಯಾ ನಿರ್ಮಿತವಂ ಮಾಡಿ, ಆ ಮಾಯಾರಚನೆಯಿಂದಾದ ಬ್ರಹ್ಮಾಂಡ ಸಂದೋಹ, ಹರಿ ವಿರಿಂಚಿ ಸುರಪತಿ ಸುರಾಸುರರು ನರನಿಕರ, ಖಗಮೃಗ ಜೀವರಾಶಿಗಳೆಲ್ಲವೂ ಶಿವನಿಂದಲಾಗಿ, ಶಿವನಿಂದ ಹೊರೆಯಿಸಿಕೊಂಡು, ಶಿವನಿಂದವೆ ಹೋದವೆಂದಡೆ, ಅವರ ಆಗು ಹೋಗು ಇರವು ಹೋಗಿನೊಳಗೆ ಲಯ ಗಮನ ಸ್ಥಿತಿ ಶಿವಂಗುಂಟೆ, ಎಲೆ ಮರುಳಗಳಿರಾ? ಗಗನದಲ್ಲಿ ತೋರಿದ ಮೇಘವು ಗಗನದಲ್ಲಿ ಅಡಗಿದವೆಂದಡೆ, ಆ ಗಗನ ತಾ ಮೇಘವೆ? ತನ್ನಾಧೀನಶಕ್ತಿದಂಡದಿಂ ಕುಂಬಾರ ಚಕ್ರವ ತಿರುಗಿಸಲು, ಆ ಚಕ್ರಭ್ರಮಣ ಚೈತನ್ಯವು ಆ ಕುಂಬಾರನೆ, ಮರುಳುಗಳಿರಾ? ಆ ಚೈತನ್ಯ ಅಡಗುವುದೆ? ನಿಲ್ಲು ಮಾಣು. ಬಿಲ್ಲ ನಾರಿಗೆ ಅಂಬಂ ಸಂಧಾನಿಸಿ ಎಸೆಯಲಾ, ಅಂಬು ಹರಿದ ಚೈತನ್ಯ ಬಿಲ್ಲು ಕಾರಣವೆ? ಅಲ್ಲ, ನಿಲ್ಲು, ಮಾಣು. ಇವೆಲ್ಲವು ಚೈತನ್ಯಂಗಳು. ಅಂತು ಸರ್ವವೆಲ್ಲವು ತೋರಿಯಡಗುವುದು. ಸರ್ವೇಶ್ವರನು, ಸರ್ವಕರ್ತೃ, ಸರ್ವಚೈತನ್ಯ, ಸೂತ್ರಯಂತ್ರವಾಹಕ ಶಿವನು. ಸರ್ವಲಯ ಗಮನ ಸ್ಥಿತಿ ತನಗುಂಟೆ? ನಿಲ್ಲು, ಮಾಣಿರೆ, ಎಲೆ ಜಡಜೀವಿಗಳಿರಾ. ಗಗನದ ರವಿ ಕಿರಣದಿಂದ ಸಕಲರೂಪಿತ ದ್ರವ್ಯಪದಾರ್ಥಂಗಳಲ್ಲಿ ಪ್ರತಿಪ್ರಭೆ ತೋರಲು, ಆ ಪ್ರತಿಪ್ರಭೆಯ ಆಗುಹೋಗಿನ ಸ್ಥಿತಿಗತಿ ಆ ಗಗನದ ಸೂರ್ಯಂಗುಂಟೆ, ಎಲೆ ಜಡಜೀವಿಗಳಿರಾ? ಈ ಪರಿಯಲೆ ವಿಶ್ವವೆಲ್ಲವಕ್ಕೂ ತಾನಲ್ಲದ ತಾನಿಲ್ಲದ ಪ್ರೇರಣ ಚೈತನ್ಯವೇ ವಿಶ್ವದ ನಯನ, ವಿಶ್ವದ ಮುಖ, ವಿಶ್ವದ ಬಾಹು, ವಿಶ್ವದ[ಚ]ರಣ, ಸ್ವರ್ಗಮರ್ತ್ಯ ಭುವನಾದ್ಯಂಗಳ ಮೂಲಚೈತನ್ಯಸೂತ್ರ ತಾನಲ್ಲದೆ, ತಾನಿಲ್ಲದೆ ಆಡಿಸುವ ಸೂತ್ರಾತ್ಮಕನಲ್ಲದೆ ಅವರಾಗು ತನಗುಂಟೆ, ಎಲೆ ಭ್ರಮಿತರಿರಾ? `ವಿಶ್ವತಶ್ಚಕ್ಷುರುತ ವಿಶ್ವತೋಮುಖೋ ವಿಶ್ವತೋ ಬಾಹುರುತ ವಿಶ್ವತಸ್ಪಾಪಾತ್| ಸಂ ಬಾಹುಭ್ಯಾಂಧಮತಿ ಸಂಪತತ್ರೈದ್ರ್ಯಾವಾ ಭೂಮೀ ಜನಯನ್ ದೇವ ಏಕಃ’ ಎನಲು, `ಈಶಾನಃ ಶಿವ ಏಕೋದೇವಃ ಶಿವಂ ಕರಃ ತತ್ಸರ್ವಮನ್ಯತ್ ಪರಿತ್ಯಜೇತ್' ಎನಲು, `ಏಕ ಏವ ರುದ್ರೋ ನ ದ್ವಿತೀಯಾಯ ತಸ್ಥು' ಎನಲು, ಶಿವನೊಬ್ಬನೇ, ಇಬ್ಬರಿಲ್ಲ. `ನ ಯಥಾಸ್ತಿ ಕೂರ್ಮರೋಮಾಣಿ, ಶೃಂಗಂ ನ ನರಮಸ್ತಕೇ ನ ಯಥಾಸ್ತಿ ವಿಯತ್ಪುಷ್ಪಂ ನ ತಥಾಸ್ತಿ ಪರಾತ್ಪರಃ |' ನಾಲ್ಕು ವೇದಂಗಳು ಬಿನ್ನವಿಸಿದವು ಕೇಳಿರೇ ಎಲೆ ವಿಪ್ರರಿರಾ. ಇದನರಿದು, ಬಸವಪ್ರಿಯ ಕೂಡಲಚೆನ್ನಸಂಗಯ್ಯನನೆ ಧ್ಯಾನಿಸಿ, ನಿರೀಕ್ಷಿಸಿ, ಸ್ತುತಿಸಿ, ಯಜಿಸಿ ಕೃತಾರ್ಥರಾಗಿರೆ ಎಲೆ ಮರುಳು ವಿಪ್ರರಿರಾ.