Index   ವಚನ - 81    Search  
 
ವಚನದ ರಚನೆಯ ನುಡಿವ ಬರುಬಾಯ ಭುಂಜಕರೆಲ್ಲ ಭಕ್ತರಪ್ಪರೆ ಅಯ್ಯಾ? ಮಾಡುವ ದಾಸೋಹದಿಂದ ಭಕ್ತಂಗೆ ಅವಗುಣಂಗಳಿಲ್ಲದಿರಬೇಕು. ಕೋಪದ ಕೆಚ್ಚಂ ಕಡಿದು, ಲೋಭಲಂ ಪಟಮಂ ಕೆದರಿ, ಮೋಹದ ಮುಳ್ಳುಮೊನೆಯ ತೆಗೆದು, ಮದದಚ್ಚಂ ಮುರಿದು, ಮಚ್ಚರಿಪ ಸರ್ಪನಂ ಸಮತೆಯೆಂಬ ಗಾರುಡದಲ್ಲಿ ಗಾರುಡಿಸಿ, ಕರಣಾದಿ ಗುಣಂಗಳಿಚ್ಛೆಗೆ ಹರಿಯಲೀಯದೆ, ವಿಶ್ರಮಿಸಿಪ್ಪ ಭಕ್ತನ ಕಾಯವೆ ಕೈಲಾಸ. ಅಂತಲ್ಲದೆ ಬರಿಯಮಾತಿಂಗೆ ಮಾತನೆ ಕೊಟ್ಟು, ತಾನಾಡಿದುದೆ ನೆಲೆಯೆಂಬಾತ ಭಕ್ತನೆ? ಅಲ್ಲ, ಉಪಜೀವಿ. ಹೇಮದಿಚ್ಛೆಗೆ ಹರಿದು ಕಾಮರತಿಗಳುಪವ, ಕೋಪದುರಿಯ ಹೊದ್ದುಕೊಂಬ, ಲೋಭಮೋಹದ ಕೆಚ್ಚ ಕೂಡಿಕೊಂಡು, ನರಕದೊಳಗೋಲಾಡುವಾತ ಭಕ್ತನೆ? ಅಲ್ಲ. ಆದಿಯಲ್ಲಿ ನಮ್ಮವರು ಹೊನ್ನು ಹೆಣ್ಣು ಮಣ್ಣು, ಈ ತ್ರಿವಿಧವ ಬಿಟ್ಟಿದರೆ? ಇಲ್ಲ. ಆವ ತಲೆಯೆತ್ತಲೀಯರಾಗಿ, ಅನ್ಯಸಂಗವ ಹೊದ್ದರು. ಭವಿಮಿಶ್ರವ ಮುಟ್ಟರು, ಹಮ್ಮುಬಿಮ್ಮುಯಿಲ್ಲದಿಪ್ಪ ಇಂತಪ್ಪರೆ ನಮ್ಮ ಭಕ್ತರು. ನಮ್ಮ ಭಕ್ತರ ನೆಲೆಯ, ಮಹಾದಾನಿ ಸೊಡ್ಡಳಾ, ನೀನೆ ಬಲ್ಲೆಯಲ್ಲದೆ, ಉಳಿದ ಜಡಜೀವಿಗಳೆತ್ತ ಬಲ್ಲರು?