Index   ವಚನ - 287    Search  
 
ಯೋಗದ ಲಾಗವರಿದು ಯೋಗಿಸಿಹೆನೆಂಬ ಯೋಗಿಗಳು ನೀವು ಕೇಳಿ. ನೆಲವಾಗಿಲ ಮುಚ್ಚಿ, ಜಲವಾಗಿಲ ಮುಚ್ಚಿ, ತಲೆವಾಗಿಲ ತೆಗೆದು ಗಗನಗಿರಿಯ ಪೂರ್ವಪಶ್ಚಿಮ ಉತ್ತರ ದಕ್ಷಿಣದ ನಡುವೆ ಉರಿವ ಅಗ್ನಿಯ ಕಂಡು, ಆ ಅಗ್ನಿಯ ಮೇಲೆ ಸ್ವರನಾಲ್ಕರ ಕೀಲುಕೂಟದ ಸಂಚಯವ ಕಂಡು, ಆ ಸಂಚಯದಲ್ಲಿ ಆಮೃತಸ್ವರವ ಹಿಡಿದು ಕೂಡುವುದೇ ಪರಮಶಿವಯೋಗ, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರನಲ್ಲಿ ಅದೇ ಪರಮನಿರ್ವಾಣ.