Index   ವಚನ - 29    Search  
 
ಎನ್ನ ಕಕ್ಷೆಯಲ್ಲಿ ಸ್ವಾಯತವಾದನಯ್ಯಾ ಶಂಕರದಾಸಿಮಯ್ಯನು. ಎನ್ನ ಕರಸ್ಥಲದಲ್ಲಿ ಸ್ವಾಯತವಾದನಯ್ಯಾ ಉರಿಲಿಂಗಪೆದ್ದಯ್ಯನು. ಎನ್ನ ಉರಸೆಜ್ಜೆಯಲ್ಲಿ ಸ್ವಾಯತವಾದನಯ್ಯ ಘಟ್ಟಿವಾಳಮದ್ದಯ್ಯನು. ಎನ್ನ ಅಮಳೋಕ್ಯದಲ್ಲಿ ಸ್ವಾಯತವಾದನಯ್ಯಾ ಅಜಗಣಯ್ಯನು. ಎನ್ನ ಮುಖಸೆಜ್ಜೆಯಲ್ಲಿ ಸ್ವಾಯತವಾದನಯ್ಯಾ ನಿಜಗುಣದೇವರು. ಎನ್ನ ಶಿಖೆಯಲ್ಲಿ ಸ್ವಾಯತವಾದನಯ್ಯಾ ಅನಿಮಿಷದೇವರು. ಎನ್ನ ಘ್ರಾಣದಲ್ಲಿ ಸ್ವಾಯತವಾದನಯ್ಯಾ ಏಕೋರಾಮಿತಂದೆಗಳು. ಎನ್ನ ಜಿಹ್ವೆಯಲ್ಲಿ ಸ್ವಾಯತವಾದನಯ್ಯಾ ಪಂಡಿತಾರಾಧ್ಯರು. ಎನ್ನ ನೇತ್ರದಲ್ಲಿ ಸ್ವಾಯತವಾದನಯ್ಯಾ ರೇವಣಸಿದ್ದೇಶ್ವರದೇವರು. ಎನ್ನ ತ್ವಕ್ಕಿನಲ್ಲಿ ಸ್ವಾಯತವಾದನಯ್ಯಾ ಸಿದ್ಧರಾಮೇಶ್ವರದೇವರು. ಎನ್ನ ಶ್ರೋತ್ರದಲ್ಲಿ ಸ್ವಾಯತವಾದನಯ್ಯಾ ಮರುಳಸಿದ್ಧೇಶ್ವರದೇವರು. ಎನ್ನ ಹೃದಯದಲ್ಲಿ ಸ್ವಾಯತವಾದನಯ್ಯಾ ಪ್ರಭುದೇವರು. ಎನ್ನ ಭ್ರೂಮಧ್ಯದಲ್ಲಿ ಸ್ವಾಯತವಾದನಯ್ಯಾ ಚೆನ್ನಬಸವಣ್ಣನು. ಎನ್ನ ಬ್ರಹ್ಮರಂಧ್ರದಲ್ಲಿ ಸ್ವಾಯತವಾದನಯ್ಯಾ ಸಂಗನಬಸವಣ್ಣನು. ಎನ್ನ ಉತ್ತಮಾಂಗದಲ್ಲಿ ಸ್ವಾಯತವಾದನಯ್ಯಾ ಮಡಿವಾಳಯ್ಯನು. ಎನ್ನ ಲಲಾಟದಲ್ಲಿ ಸ್ವಾಯತವಾದನಯ್ಯಾ ಸೊಡ್ಡಳ ಬಾಚರಸರು. ಎನ್ನ ಪಶ್ಚಿಮದಲ್ಲಿ ಸ್ವಾಯತವಾದನಯ್ಯಾ ಹಡಪದಪ್ಪಣ್ಣನು. ಎನ್ನ ಕಂಠದಲ್ಲಿ ಸ್ವಾಯತವಾದನಯ್ಯಾ ಕಿನ್ನರ ಬ್ರಹ್ಮಯ್ಯನು. ಎನ್ನ ಸರ್ವಾಂಗದಲ್ಲಿ ಸ್ವಾಯತವಾದನಯ್ಯಾ ಗಣಂಗಳು. ಮಹಾಲಿಂಗ ಕಲ್ಲೇಶ್ವರಾ, ನಿಮ್ಮ ಶರಣರ ಶ್ರೀಪಾದಕ್ಕೆ ನಮೋ ನಮೋ ಎನುತಿರ್ದೆನು.