Index   ವಚನ - 183    Search  
 
ಪ್ರಸಾದ ಪ್ರಸಾದವೆನುತಿಪ್ಪಿರಿ. ಪ್ರಸಾದವೆಂತಿಪ್ಪುದು? ಪ್ರಸಾದಿಯೆಂತಿಪ್ಪ? ಪ್ರಸಾದಗ್ರಾಹಕ ಎಂತಿರಬೇಕು? ಎಂದರಿಯದೆ ಪ್ರಸಾದವೆಂದು ಇಕ್ಕಿಹೆವೆಂಬರು, ಕೊಂಡೆಹೆವೆಂಬರು. ಕೊಂಡು ನಗೆಗೆಡೆಯಾಗುತಿಪ್ಪರಯ್ಯಾ. ಪ್ರಸಾದ ಪರಾಪರವಾದುದು, ಶಾಂತನಾಗಿ, ಸತ್ಯನಾಗಿ, ಪ್ರಸನ್ನವಾಗಿಹುದು ಪ್ರಸಾದಿ. ಕರ್ಮಣಾ ಮನಸಾ ವಾಚಾ ಗುರುಭಕ್ತಿವಿಚಕ್ಷಣಃ ಶರೀರಂ ಪ್ರಾಣಮರ್ಥಂ ಚ ಸದ್ಗುರುಭ್ಯೋ ನಿವೇದಯೇತ್ ಎಂದು ದೀಕ್ಷಾಮೂರ್ತಿ ಪರಶಿವಗುರುಲಿಂಗಕ್ಕೆ ತನುಮನಧನವನರ್ಪಿಸುವುದು. ಪೂಜಾಕಾರಮೂರ್ತಿ ಪರಮಗುರುಮಹಾಲಿಂಗಕ್ಕೆ ತನುಮನಧನವರ್ಪಿಸಿ, ಶಿಕ್ಷಾಮೂರ್ತಿ ಪರಮಗುರುಜಂಗಮಲಿಂಗಕ್ಕೆ ತನು ಮನ ಧನವನರ್ಪಿಸಿ, ಪ್ರಸನ್ನಪ್ರಸಾದವ ಪಡೆದು ಭೋಗಿಸಿ, ಆ ಪ್ರಸಾದವ ಶುದ್ಧವ ಮಾಡಿ ನಿಲಿಸಿ, ಶಾಂತನಾಗಿ, ನಿತ್ಯನಾಗಿ, ಪ್ರಸನ್ನಮೂರ್ತಿಯಾಗಿಪ್ಪ ಆ ಪ್ರಸಾದಿಯೇ ಪ್ರಸಾದಗ್ರಾಹಕ. ಆ ಪ್ರಸಾದಿಯೇ ಗುರುವೆಂದು, ಆ ಪ್ರಸಾದಿಯೇ ಲಿಂಗವೆಂದು ಆ ಪ್ರಸಾದಿಯೇ ಜಂಗಮವೆಂದು ತನುಮನಧನದಲ್ಲಿ ವಂಚನೆ ಇಲ್ಲದೆ ಕೇವಲ ವಿಶ್ವಾಸದಿಂದ ನಂಬಿ ಪ್ರಸಾದವ ಗ್ರಹಿಸುವುದು. ಇದು ಕಾರಣ, ಪ್ರಸಾದಗ್ರಾಹಕನ ಪರಿಯೆಂಬ ಭಾವ ಹಿಂಗದೆ ಇಕ್ಕುವ ಪರಿಯ ನೋಡಾ. ಇದು ಕಾರಣ. ಮಹಾನುಭಾವರ ಸಂಗದಿಂದ ಅರಿಯಬಹುದಯ್ಯಾ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.