Index   ವಚನ - 4    Search  
 
ಕುರಿ ಕೋಳಿ ಕಿರಿಮೀನು ತಿಂಬವರಿಗೆಲ್ಲ ಕುಲಜ ಕುಲಜರೆಂದೆಂಬರು. ಶಿವಗೆ ಪಂಚಾಮೃತವ ಕರೆವ ಪಶುವ ತಿಂಬ ಮಾದಿಗ ಕೀಳುಜಾತಿಯೆಂಬರು. ಅವರೆಂತು ಕೀಳುಜಾತಿಯಾದರು? ಜಾತಿಗಳು ನೀವೇಕೆ ಕೀಳಾಗಿರೊ? ಬ್ರಾಹ್ಮಣನುಂಡುದು ಪುಲ್ಲಿಗೆ ಶೋಭಿತವಾಗಿ ನಾಯಿ ನೆಕ್ಕಿ ಹೋಯಿತು. ಮಾದಿಗರುಂಡುದು ಪುಲ್ಲಿಗೆ ಬ್ರಾಹ್ಮಣಗೆ ಶೋಭಿತವಾಯಿತು. ಅದೆಂತೆಂದಡೆ: ಸಿದ್ದಲಿಕೆಯಾಯಿತು, ಸಗ್ಗಳೆಯಾಯಿತು. ಸಿದ್ದಲಿಕೆಯ ತುಪ್ಪವನು, ಸಗ್ಗಳೆಯ ನೀರನು ಶುದ್ಧವೆಂದು ಕುಡಿವ ಬುದ್ಧಿಗೇಡಿ ವಿಪ್ರರಿಗೆ ನಾಯಕನರಕ ತಪ್ಪದಯ್ಯಾ. ಉರಿಲಿಂಗಪೆದ್ದಿಗಳರಸು ಒಲ್ಲನವ್ವಾ.