Index   ವಚನ - 23    Search  
 
ಗುರುಪ್ರಸಾದಿ ಆ ಪ್ರಸಾದವ ಲಿಂಗಕ್ಕೆ ಅರ್ಪಿಸಲಾಗದು, ಲಿಂಗಪ್ರಸಾದಿ ಆ ಪ್ರಸಾದವ ಜಂಗಮಪ್ರಸಾದದಲ್ಲಿ ಕೂಡಲಾಗದು. ಇಂತೀ ತ್ರಿವಿಧಪ್ರಸಾದವ ತಾ ಸ್ವೀಕರಿಸುವಲ್ಲಿ ತನ್ನ ದೃಷ್ಟದ ಇಷ್ಟಕ್ಕೆ ಅರ್ಪಿಸದೆ ಮುಟ್ಟಲಾಗದು. ಇಂತೀ ಭಾವ ಅಮೃತದಲ್ಲಿ ವಿಷ ಬೆರೆದಂತೆ: ಅಮೃತವ ಚೆಲ್ಲಬಾರದು, ವಿಷವ ಮುಟ್ಟಬಾರದು. ಗೋವು ಮಾಣಿಕವ ನುಂಗಿದಂತೆ: ಗೋವ ಕೊಲ್ಲಬಾರದು, ಮಾಣಿಕವ ಬಿಡಬಾರದು. ಗೋವು ಸಾಯದೆ ಮಾಣಿಕ ಕೆಡದೆ ಬಹ ಹಾದಿಯ ಬಲ್ಲಡೆ ಆತ ತ್ರಿವಿಧ ಪ್ರಸಾದಿಯೆಂಬೆ. ಆ ಗುಣ ಏಲೇಶ್ವರಲಿಂಗಕ್ಕೂ ಅಸಾಧ್ಯ ನೋಡಾ!