ಶಿವಶಿವಾ, ಈ ಮರುಳಮಾನವರ
ಮರುಳತನವ ನಾನೇನೆಂಬೆನಯ್ಯಾ.
ಹೊನ್ನು ತನ್ನದೆಂಬರು, ಹೊನ್ನು ರುದ್ರನದು.
ಹೆಣ್ಣು ತನ್ನದೆಂಬರು, ಹೆಣ್ಣು ವಿಷ್ಣುವಿನದು.
ಮಣ್ಣು ತನ್ನದೆಂಬರು, ಮಣ್ಣು ಬ್ರಹ್ಮನದು.
ಇಂತೀ ತ್ರಿವಿಧವು ನಿಮ್ಮವೆಂಬಿರಿ-
ನಿಮ್ಮವು ಅಲ್ಲ ಕಾಣಿರೋ ಎಲಾ ದಡ್ಡ ಪ್ರಾಣಿಗಳಿರಾ.
ಇದಕ್ಕೆ ದೃಷ್ಟಾಂತ:
ಗಗನದಲ್ಲಿ ಚಂದ್ರೋದಯವಾಗಲು
ಭೂಮಂಡಲದಲ್ಲಿ ಕ್ಷೀರಸಮುದ್ರ ಹೆಚ್ಚುವದು.
ಹೆಚ್ಚಿದರೇನು ? ಆ ಚಂದ್ರನ ವ್ಯಾಳ್ಯಕ್ಕೆ ಸಮುದ್ರವಿಲ್ಲ;
ಸಮುದ್ರದ ವ್ಯಾಳ್ಯಕ್ಕೆ ಚಂದ್ರನಿಲ್ಲ.
ಮತ್ತೆ ಆಕಾಶದಲ್ಲಿ ಮೋಡ ಬಂದು ಸುಳಿಗಾಳಿ ಬೀಸಲು
ಗಿರಿಯೊಳಗಿರ್ದ ನವಿಲು ತನ್ನ ಪಕ್ಕವ ಬಿಚ್ಚಿ
ಹರುಷಾನಂದದಲ್ಲಿ ಆಡುವದು ;
ಪ್ರೇಮದಿಂದಲಿ ಕುಣಿಯವದು.
ಕುಣಿದರೇನು ? ಚಂಡವಾಯುವಿನಿಂದ
ಆಕಾಶದೊಳಗಣ ಕಾರಮುಗಿಲು ಹಾರಿಹೋಹಾಗ
ನವಿಲು ಅಡ್ಡಬಂದಿತ್ತೆ ? ಇಲ್ಲ.
ಗಿರಿಯೊಳಗಣ ಮಯೂರನನ್ನು
ವ್ಯಾಧನು ಬಂದು ಬಲೆಹಾಕಿ ಕೊಲ್ಲುವಾಗ
ಆ ಮೋಡ ಅಡ್ಡಬಂದಿತ್ತೆ ? ಇಲ್ಲ.
ಇದರ ಹಾಂಗೆ, ನಿಮಗೆ ಬಾಲಪ್ರಾಯದಲ್ಲಿ ಮಾತಾಪಿತರ ಮೋಹ.
ಯೌವ್ವನಪ್ರಾಯದಲ್ಲಿ ಸ್ತ್ರೀ, ಪುತ್ರಮೋಹ.
ಮಧ್ಯಪ್ರಾಯದಲ್ಲಿ ಧನಧಾನ್ಯದ ಮೋಹ.
ಈ ಪರಿಯಲ್ಲಿ ಸಕಲವು ನೀವು ಇರುವ ಪರ್ಯಂತರದಲ್ಲಿ
ಮಾಯಾ ಮಮಕಾರವಲ್ಲದೆ ಅಳಲಿ ಬಳಲಿ,
ಕುಸಿದು ಕುಗ್ಗಿ ಮುಪ್ಪುವರಿದು,
ಮರಣಕಾಲಕ್ಕೆ ಯಮದೂತರು ಬಂದು
ಹಿಂಡಿ ಹಿಪ್ಪಿಯ ಮಾಡಿ ಒಯ್ಯುವಾಗ,
ಮೂವರೊಳಗೆ ಒಬ್ಬರು ಅಡ್ಡಬಂದರೆ ? ಬಂದುದಿಲ್ಲ.
ಅವರ ಸಂಕಟಕ್ಕೆ ನೀವಿಲ್ಲ, ನಿಮ್ಮ ಸಂಕಟಕ್ಕೆ ಅವರಿಲ್ಲ.
ನಿನ್ನ ಪುಣ್ಯಪಾಪಕ್ಕೆ ಅವರಿಲ್ಲ, ಅವರ ಪುಣ್ಯಪಾಪಕ್ಕೆ ನೀನಿಲ್ಲ.
ನಿನ್ನ ಸುಖದುಃಖಕ್ಕೆ ಅವರಿಲ್ಲ, ಅವರ ಸುಖದುಃಖಕ್ಕೆ ನೀನಿಲ್ಲ.
ನಿನಗವರಿಲ್ಲ, ಅವರಿಗೆ ನೀನಿಲ್ಲ.
ಇಂತಿದನು ಕಂಡು ಕೇಳಿ ಮತ್ತಂ
ಹಿತ್ತಲಕ್ಕೆ ಹಳೆಯೆಮ್ಮಿ ಮನಸೋತ ಹಾಗೆ,
ಹಾಳಕೇರಿಗೆ ಹಂದಿ ಜಪ ಇಟ್ಟ ಹಾಗೆ,
ಹಡಕಿಗೆ ಶ್ವಾನ ಮೆಚ್ಚಿದ ಹಾಗೆ,
ಮತ್ತಂ, ಮಾನವರೊಳಗೆ ಹಂದಿ, ನಾಯಿ, ಹಳೆಯೆಮ್ಮಿಯೆಂದರೆ-
ಜೀವನಬುದ್ಭಿಯುಳ್ಳವನೇ ಹಂದಿ.
ಕರಣಬುದ್ಧಿಯುಳ್ಳವನೇ ನಾಯಿ.
ಮಾಯಾಪ್ರಕೃತಿಯುಳ್ಳವನೇ ಹಳೆಯೆಮ್ಮಿ.
ಇವಕ್ಕೆ ಮೂರು ಮಲವಾವೆಂದಡೆ:
ಆಣವಮಲ, ಮಾಯಾಮಲ,
ಕಾರ್ಮಿಕಮಲವೆಂಬ ಮಲತ್ರಯವನು,
ಕಚ್ಚಿ ಮೆಚ್ಚಿ ಮರುಳಾಗಿ ಬಿಡಲಾರದೆ ಕಂಡು ಕೇಳಿ ಮೋಹಿಸಿ,
ಇದನು ಬಿಟ್ಟು ವೈರಾಗ್ಯಹೊಂದಿದರೆ ಮೋಕ್ಷವಿಲ್ಲೆಂದು
ಪ್ರಪಂಚವಿಡಿದು ಪಾರಮಾರ್ಥ ಸಾಧಿಸಬೇಕೆಂದು ಹೇಳುವವರ,
ಹೀಂಗೆ ಮಾಡಬೇಕೆಂಬುವರ ಬುದ್ಧಿಯೆಂತಾಯಿತಯ್ಯಾ ಎಂದಡೆ:
ಗಿಳಿ ಓದಬಲ್ಲುದು; ಬಲ್ಲರೇನು ತನ್ನ ಮಲವ ತಾನು ತಿಂದ ಹಾಗೆ.
ವಿಹಂಗ ಹನ್ನೆರಡು ಯೋಜನದ ಮೇಲೆ
ಅಮೃತಫಲವಿಪ್ಪುದ ಬಲ್ಲದು.
ಬಲ್ಲಡೇನು, ಅದು ಬಾಯಿಲಿ ತಿಂದು ಬಾಯಿಲೆ ಕಾರುವದು.
ಹಾಂಗೆ ಈ ಮಾನವರು ತ್ರಿವಿಧಮಲಸಮಾನವೆಂಬುದ ಬಲ್ಲರು,
ಬಲ್ಲರೇನು ? ಬಿಡಲಾರರು.
ಇಂತೀ ಪರಿಪರಿಯಲ್ಲಿ ಕೇಳಿ ಕೇಳಿ ಕಂಡು ಬಿಡಲಾರದೆ ಇದ್ದರೆ
ಇಂಥ ಹೊಲೆಸೂಳೆಯ ಮಕ್ಕಳ ಶರೀರವ
ಖಡ್ಗದಿಂದ ಕಡಿದು ಕರಗಸದಿಂದ ಕೊರೆದು
ಛಿದ್ರಚಿನಿಪಾಲವ ಮಾಡಿ,
ಹದ್ದು ಕಾಗೆ ನಾಯಿಗಳಿಗೆ ಹಾಕಿದರೆ ಎನ್ನ ಸಿಟ್ಟು ಮಾಣದು.
ಕಡೆಯಲ್ಲಿ ಚಂದ್ರಸೂರ್ಯರು ಇರುವ ಪರ್ಯಂತರ
ಮಹಾ ಅಘೋರ ನರಕದಲ್ಲಿ ಕಲ್ಪಕಲ್ಪಾಂತರದಲ್ಲಿ
ಹಾಕದೆ ಬಿಡನೆಂದಾತನು
ವೀರಾಧಿವೀರ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ
ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.