Index   ವಚನ - 1    Search  
 
ವಿಭೂತಿ ರುದ್ರಾಕ್ಷಿಯ ಧರಿಸಿ ಷಡಕ್ಷರಿಯಂ ಜಪಿಸಿ ಗುರು ಲಿಂಗ ಜಂಗಮದ ಆದ್ಯಂತವನರಿಯದೆ ಏನೆಂದು ಪೂಜಿಸುವಿರಿ, ಆರಾಧಿಸುವಿರಿ? ಅದೆಂತೆಂದಡೆ: ನೆಲದ ಮೇಲಣ ಶಿಲೆಯ ಕಲ್ಲುಕುಟಿಕ ಕಡಿದು ಖಂಡಿಸಿ ಹರದನ ಕೈಯಲ್ಲಿ ಕೊಟ್ಟು ಮಾರಿಸಿಕೊಂಡುದು ಲಿಂಗವಾದ ಪರಿ ಹೆಂಗೇ? ಸಕಲ ವ್ಯಾಪಾರ ಅಳುವಿಂಗೆ ಒಳಗಾಗಿ ತೊಡಿಸಿ ಬರೆಸಿಕೊಂಡುದು ಮಂತ್ರವಾದ ಪರಿ ಹೇಂಗೆ? ಅಜ್ಞಾನಿ ಮೃಗ ಪಶುವಿನ ಸಗಣಿಯ ಸುಟ್ಟುದು ವಿಭೂತಿಯಾದ ಪರಿ ಹೇಂಗೆ? ಪಂಚಭೂತಿಕದಿಂದ ಜನಿಸಿದ ವೃಕ್ಷದ ಫಲ ರುದ್ರಾಕ್ಷಿಯಾದ ಪರಿ ಹೇಂಗೆ? ಸಕಲ ಜೀವವೆರಸಿ ಕರಗಿದ ಅಸಿಯ ಜಲ ತೀರ್ಥವಾದ ಪರಿ ಹೇಂಗೆ? ಸಕಲ ಪ್ರಾಣಿಗಳಾಹಾರ ಹದಿನೆಂಟು ಧಾನ್ಯ ಕ್ಷುಧಾಗ್ನಿಯಲ್ಲಿ ಜನಿಸಿ ಪಚನವಾದುದು ಪ್ರಸಾದವಾದ ಪರಿ ಹೇಂಗೆ? ಅದೆಂತೆಂಡೆ; ನಿಗಮ ಶಾಸ್ತ್ರಕ್ಕೆ ಅಗಣಿತವಾದ ನಾದಬಿಂದುವಿಗೆ ನಿಲುಕದ ನಿತ್ಯತೃಪ್ತ ಪರಂಜ್ಯೋತಿಲಿಂಗದ ವೈಭವಕ್ಕೆ ಅಂಗವಾದುದು ಈ ಗುರುವಲಾ ಎಂದು ಅರಿದು ಆ ಲಿಂಗದ ಚೈತನ್ಯ ಈ ಲಿಂಗವಲಾ ಎಂದು ಅರಿದು ಮಾಡೂದು ತನು ಮನ ಧನ ವಂಚನೆಯಳಿದು. ಗುರುಭಕ್ತಿ ಸನ್ನಿಹಿತವಾಗಿ ಆ ಲಿಂಗದ ವದನ ಈ ಜಂಗಮವಲಾ ಎಂದರಿದು ಮಾಡೂದು ಆ ತನು ಮನ ಧನ ವಂಚನೆಯಳಿದು. ಜಂಗಮಭಕ್ತಿ ಸನ್ನಿಹಿತವಾಗಿ ಆ ಲಿಂಗದ ಕಾಯಕಾಂತಿಯ ಬೆಳಗಿನ ಐಶ್ವರಿಯಲಾ ಎಂದರಿದು ಧರಿಸೂದು ಶ್ರೀ ವಿಭೂತಿಯ. ಆ ಲಿಂಗದ ಶೃಂಗಾರದ ಹರನಾಭರಣವಲಾ ಎಂದರಿದು ಅಳವಡಿಸೂದು ರುದ್ರಾಕ್ಷಿಯನು. ಆ ಲಿಂಗದ ಉತ್ತುಂಗ ಕಿರಣ ಚರಣಾಂಬುಜವಲಾ ಎಂದು ಧರಿಸೂದು, ಕೊಂಬುದು ಪಾದೋದಕವನು. ಆ ಲಿಂಗದ ನಿತ್ಯಪದ ಸಂಯೋಗ ಶೇಷವ ತಾ ಎಂದರಿದು ಕೊಂಬುದು ಪ್ರಸಾದವನು. ಇಂತಿವೆಲ್ಲವನರಿದುದಕ್ಕೆ ಸಂತೋಷವಾಗಿ ಚರಿಸುವಾತನೆ ಸದ್ಬಕ್ತ. ಆತನ ಕಾಯ ಕರಣ ಪ್ರಾಣ ಭಾವಾದಿಗಳು ಸೋಂಕಿದೆಲ್ಲವೂ ಲಿಂಗದ ಸೋಂಕು, ಲಿಂಗದ ಕ್ರೀ, ಲಿಂಗದ ದಾಸೋಹ. ಇಂತೀ ತ್ರಿವಿಧವ ಸವೆದು ಅಳಿದುಳಿದ ಸದ್ಬಕ್ತನ ಶ್ರೀಪಾದಕ್ಕೆ ನಮೋ ನಮೋ ಎಂಬೆನು ಕಾಣಾ, ಬಸವಣ್ಣಪ್ರಿಯ ನಿಃಕಳಂಕ ಸೋಮೇಶ್ವರನೆ.