Index   ವಚನ - 5    Search  
 
ಗುರುಲಿಂಗಜಂಗಮಾರ್ಚನೆಯ ಕ್ರಮವ ದಯೆಯಿಂದ ಕರುಣಿಪುದು ಸ್ವಾಮಿ. ಕೇಳೈ ಮಗನೆ : ತಾನಿದ್ದ ಊರಲ್ಲಿ ಗುರುವು ಇದ್ದಡೆ ನಿತ್ಯ ತಪ್ಪದೆ ದರುಶನವ ಮಾಡುವುದು. ಗುರುಪೂಜೆಯ ಮಾಡುವಾಗ ಆ ಗುರುವಿನೊಳಗೆ ಲಿಂಗ-ಜಂಗಮವುಂಟೆಂದು ಭಾವಿಸಿ ತನು-ಮನ-ಧನವನೊಪ್ಪಿಸಿ ಅರ್ಚಿಸಿದ್ದುದೆ ಗುರುಪೂಜೆ. ಲಿಂಗಪೂಜೆಯ ಮಾಡುವಾಗ ಆ ಲಿಂಗದೊಳಗೆ ಜಂಗಮ-ಗುರುವುಂಟೆಂದುಭಾವಿಸಿ ತನು-ಮನ-ಧನವನೊಪ್ಪಿಸಿ ಅರ್ಚಿಸಿದ್ದುದೆ ಲಿಂಗಪೂಜೆ. ಇನ್ನು ಜಂಗಮದ ಪೂಜೆ ಮಾಡುವಾಗ ಆ ಜಂಗಮದೊಳಗೆ ಗುರು-ಲಿಂಗವುಂಟೆಂದು ಭಾವಿಸಿ ತನು-ಮನ-ಧನವನೊಪ್ಪಿಸಿ ಅರ್ಚಿಸಿದ್ದುದೆ ಜಂಗಮಪೂಜೆ. ಈ ತ್ರಿವಿಧಮೂರ್ತಿ ಭಕ್ತನ ತ್ರಿವಿಧ ತನುವಿಗೋಸ್ಕರವಾಗಿ ಇಷ್ಟ ಪ್ರಾಣ ಭಾವಲಿಂಗಸ್ವರೂಪವಾಗಿಹರೆಂದು ನಿರೂಪಿಸಿದಿರಿ ಸ್ವಾಮಿ. ಆ ತ್ರಿವಿಧಲಿಂಗದ ಪೂಜೆಯ [ಕ್ರಮವ] ಕರುಣಿಪುದು ಎನ್ನ ಶ್ರೀಗುರುವೇ. ಕೇಳೈ ಮಗನೆ: ಇಷ್ಟಲಿಂಗದ ಪೂಜೆಯ ಮಾಡುವಾಗ ಆ ಇಷ್ಟಲಿಂಗದೊಳಗೆ ಪ್ರಾಣಲಿಂಗ ಭಾವಲಿಂಗವುಂಟೆಂದು ಭಾವಿಸಿ ಕರ-ಮನ-ಭಾವದೊಳಗಿರಿಸಿ ಪೂಜಿಸುವುದು ಇಷ್ಟಲಿಂಗದಪೂಜೆ. ಪ್ರಾಣಲಿಂಗದ ಪೂಜೆಯ ಮಾಡುವಾಗ ಆ ಪ್ರಾಣಲಿಂಗದೊಳಗೆ ಇಷ್ಟಲಿಂಗ ಭಾವಲಿಂಗವುಂಟೆಂದು ಭಾವಿಸಿ ಭಾವ-ಮನ-ಕರದೊಳಗಿರಿಸಿ ಪೂಜಿಸುವುದು ಪ್ರಾಣಲಿಂಗದಪೂಜೆ. ಭಾವಲಿಂಗದ ಪೂಜೆಯ ಮಾಡುವಾಗ ಆ ಭಾವಲಿಂಗದೊಳಗೆ ಇಷ್ಟಲಿಂಗ ಪ್ರಾಣಲಿಂಗವುಂಟೆಂದು ಭಾವಿಸಿ ಕರ-ಮನ-ಭಾವದೊಳಗಿರಿಸಿ ಪೂಜಿಸುವುದು ಭಾವಲಿಂಗದಪೂಜೆ. ಸಾಕ್ಷಿ: "ಏಕಮೂರ್ತಿಸ್ತ್ರಯೋ ಭಾಗಾಃ ಗುರುರ್ಲಿಂಗಂತು ಜಂಗಮಃ | ಜಂಗಮಶ್ಚ ಗುರುರ್ಲಿಂಗಂ ತ್ರಿವಿಧಂ ಲಿಂಗಮುಚ್ಯತೇ ||" ಎಂದುದಾಗಿ, ತ್ರಿವಿಧವು ಒಂದೇ ಎಂದರಿದಾತ ನಮ್ಮ ಶಾಂತಕೂಡಲಸಂಗಮದೇವ