Index   ವಚನ - 40    Search  
 
ಅರುಹಿನ ಕುರುಹ ಕಾಣದೆ ಗಿರಿ ಕೋಡಗಲ್ಲ ಮೇಲೆ ತಲೆಕೆಳಗೆ ಮಾಡಿ ತಪಸ್ಸವ ಮಾಡಿದಡಿಲ್ಲ, ಕಾಲಕರ್ಮಂಗಳ ದಂಡಿಸಿದಡಿಲ್ಲ, ಪೃಥ್ವಿ ತಿರುಗಿ, ತೀರ್ಥಂಗಳ ಮಿಂದು, ನಿತ್ಯನೇಮಂಗಳ ಮಾಡಿದಡಿಲ್ಲ, ಜಲಸಮಾಧೀಯಲ್ಲಿ ಕುಳಿತಡಿಲ್ಲ, ಇದಕ್ಕೆ ಶ್ಲೋಕ : "ಪೂಜಾ ಕೋಟಿ ಸಮಂ ಸ್ತೋತ್ರಂ ಸ್ತೋತ್ರ ಕೋಟಿ ಸಮಂಜಪಃ| ಜಪ ಕೋಟಿ ಸಮಂ ಧ್ಯಾನಂ ಧ್ಯಾನಕೋಟಿ ಮನೋಲಯಂ||" ಇಂತೆಂದುದಾಗಿ, ಸುತ್ತಿಸುಳಿವ ಮನವನು ಚಿತ್ತದಲ್ಲಿರಿಸಿ ನಿಶ್ಚಿಂತವಾದಡೆ ನಿತ್ಯಪ್ರಕಾಶ ಗುರು ಗುಹೇಶ್ವರಲಿಂಗವು ಮತ್ತೆ ಅರಸಲುಂಟೇನಯ್ಯಾ ? ಮಠವ್ಯಾಕೊ, ಪರ್ವತವ್ಯಾಕೊ, ಜನವ್ಯಾಕೋ, ನಿರ್ಜನವ್ಯಾಕೊ ಚಿತ್ತ ಸಮಾಧಾನವುಳ್ಳ ಪುರುಷಂಗೆ ? ಹೊರಗಣ ಧ್ಯಾನ ಮೌನ ಜಪತಪ ನಿತ್ಯನೇಮಂಗಳ್ಯಾಕೊ ತನ್ನ ತಾನರಿದ ಶರಣಂಗೆ ನಮ್ಮ ಗೊಹೇಶ್ವರಪ್ರಿಯ ನಿರಾಳಲಿಂಗ ?