Index   ವಚನ - 1589    Search  
 
ಲಿಂಗಾಚಾರ ಸದಾಚಾರ ಶಿವಾಚಾರ ಗಣಾಚಾರ ಭೃತ್ಯಾಚಾರವೆಂಬ ಪಂಚಾಚಾರದ ಆಚರಣೆಯೆಂತೆಂದಡೆ: ಲಿಂಗವಲ್ಲದೆ ಅನ್ಯವನರಿಯದಿಹುದೆ ಲಿಂಗಾಚಾರ. ಸಜ್ಜನ ಕಾಯಕದಲ್ಲಿ ತಂದು ಗುರು-ಲಿಂಗ-ಜಂಗಮಕ್ಕೆ ನೀಡಿ ಸತ್ಯಶುದ್ಧನಾಗಿಹುದೆ ಸದಾಚಾರ. ಶಿವಭಕ್ತರಲ್ಲಿ ಕುಲ ಗೋತ್ರ ಜಾತಿ ವರ್ಣಾಶ್ರಮವನರಸದೆ ಅವರೊಕ್ಕುದ ಕೊಂಬುದೆ ಶಿವಾಚಾರ. ಶಿವಚಾರದ ನಿಂದೆಯ ಕೇಳದಿಹುದೆ ಗಣಾಚಾರ. ಶಿವಶರಣರೆ ಹಿರಿಯರಾಗಿ ತಾನೆ ಕಿರಿಯನಾಗಿ ಭಯಭಕ್ತಿಯಿಂದ ಆಚರಿಸುವುದೆ ಭೃತ್ಯಾಚಾರ. ಇಂತೀ ಪಂಚಾಚಾರವುಳ್ಳ ಪರಮಸದ್ಭಕ್ತರ ಒಕ್ಕುದನಿಕ್ಕಿ ಸಲಹಯ್ಯಾ ಪ್ರಭುವೆ, ಕೂಡಲಚೆನ್ನಸಂಗಮದೇವಾ.