ಒಬ್ಬ ಶಿವಶರಣನು ಶಿವರಾತ್ರಿಯಲ್ಲಿ
ನಿತ್ಯ ಶಿವಯೋಗವ ಮಾಡುವುದ ಕಂಡೆನಯ್ಯ.
ಅದು ಹೇಗೆಂದಡೆ: ಅರುಹೆಂಬ ಸಮ್ಮಾರ್ಜನೆಯ ಮಾಡಿ,
ಕುರುಹೆಂಬ ಗದ್ದುಗೆಯ ನೆಲೆಯಂಗೊಳಿಸಿ,
ಸುಜ್ಞಾನವೆಂಬ ರಂಗವಾಲಿಯ ತುಂಬಿ,
ಚಂದ್ರಸೂರ್ಯಾದಿಗಳೆಂಬ ದೀವಿಗೆಯ ಮುಟ್ಟಿಸಿ,
ಮಹಲಿಂಗವೆಂಬ ಮೂರ್ತಿಯಂ ನೆಲೆಯಂಗೊಳಿಸಿ,
ಆ ಲಿಂಗಕ್ಕೆ ಸಜ್ಜನವೆಂಬ ಮಜ್ಜನವಂ ನೀಡಿ,
ಅಂತರಂಗದ ಬೆಳಗಿನ ಮಹಾಚಿದ್ವಿಭೂತಿಯಂ ಧರಿಸಿ,
ನಿರ್ಮಳವೆಂಬ ಗಂಧವನೊರೆದು, ಸುಜ್ಞಾನವೆಂಬ ಅಕ್ಷತೆಯನಿಟ್ಟು,
ನಿರ್ಭಾವವೆಂಬ ಪತ್ರಿಯನೇರಿಸಿ, ನಿರ್ದ್ವಂದ್ವವೆಂಬ ಧೂಪವ ತೋರಿ,
ಒಬ್ಬ ಮೂರ್ತಿ ನವರತ್ನದ ಹರಿವಾಣದಲ್ಲಿ
ಪಂಚಾರ್ತಿಯ ಮೇಲೆ ಏಕಾರ್ತಿಯನಿಕ್ಕಿ, ಪಂಚದೀಪಂಗಳ ರಚಿಸಿ,
ಆ ಲಿಂಗಕ್ಕೆ ಓಂ ನಮೋ ಓಂ ನಮೋ ಎಂದು
ಬೆಳಗುತಿರ್ಪರು ನೋಡಾ
ಝೇಂಕಾರ ನಿಜಲಿಂಗಪ್ರಭುವೆ.