ವಚನ - 1059     
 
ಕಲ್ಯಾಣವೆಂಬ ಪ್ರಣತೆಯಲ್ಲಿ ಭಕ್ತಿರಸವೆಂಬ ತೈಲವನೆರೆದು, ಆಚಾರವೆಂಬ ಬತ್ತಿಗೆ ಬಸವಣ್ಣನೆಂಬ ಜ್ಯೋತಿಯ ಮುಟ್ಟಿಸಲು ತೊಳಗಿ ಬೆಳಗುತ್ತಿದ್ದಿತ್ತಯ್ಯಾ ಶಿವನ ಪ್ರಕಾಶ! ಆ ಬೆಳಗಿನೊಳಗೆ ಒಪ್ಪುತ್ತಿದ್ದರಯ್ಯಾ ಅಸಂಖ್ಯಾತ ಭಕ್ತಗಣಂಗಳು. ಶಿವಭಕ್ತರಿರ್ದ ಕ್ಷೇತ್ರವೆ ಅವಿಮುಕ್ತಕ್ಷೇತ್ರವೆಂಬುದು ಹುಸಿಯೆ? ಶಿವಭಕ್ತರಿರ್ದ ದೇಶ ಪಾವನವೆಂಬುದು ಹುಸಿಯೆ? ಗುಹೇಶ್ವರಲಿಂಗದಲ್ಲಿ ಎನ್ನ ಪರಮಾರಾಧ್ಯ ಸಂಗನಬಸವಣ್ಣನ ಮಹಿಮೆಯ ನೋಡಾ ಸಿದ್ಧರಾಮಯ್ಯಾ.