ಆ ಪರಶಿವನ ನಿಜಸ್ವರೂಪವೇ ಬ್ರಹ್ಮಾಂಡವಾಗಿ,
ಪಿಂಡಾಂಡವಾಗಿ, ಕರಣಂಗಳಾಗಿ, ಕರ್ಮಂಗಳಾಗಿ,
ಸೃಷ್ಟಿ ಸ್ಥಿತಿ ಲಯಂಗಳಾಗಿ, ನೋವು ಸಾವುಗಳಾಗಿ,
ತಾನೇ ಇದ್ದದ್ದು, ಸರ್ವವು ತಾನೆಂಬುದು ತಾನೇ ಮರೆತು,
ಶಿಶುವು ತಾನಾಡುವ ಆಟದಲ್ಲಿ,
ಕಲ್ಲಿಗೆ ಕಾಲ ತಗಲಿಸಿಕೊಂಡು ಅಳುವಂತೆ,
ವಿಷಯದಿಚ್ಛೆಯಲ್ಲಿ ನೊಂದು ಶೋಕಿಸುತ್ತಿರಲು,
ಆ ಶಿಶುವಿಗೆ ತಂದಿ ಬಂದು ಕಣ್ಣೀರೊರಸಿ,
ಆ ಕಲ್ಲತಗಲಿದ ಕಾಲ್ನೋವಿಗೆ ಔಷಧಿಯ ಮಾಡಿ,
ತನ್ನ ಹೆಂಡತಿಯ ಕರೆದು,
ಮಗನ ಸಮಾಧಾನಮಾಡೆಂದು ಹೇಳಲು,
ಆ ತಾಯಿಯೆತ್ತಿಕೊಂಡು,
ಕಣ್ಣು, ಮೂಗು, ಕಿವಿ, ಬಾಯಿ, ಮೈ ಧೂಳವನ್ನೆಲ್ಲಾ
ತಾ ಹೊದ್ದ ಮೇಲ್ಸೆರಗಲೊರಸಿ ಮೊಲೆಯುಣಿಸಿ,
ತೊಟ್ಟಿಲೊಳು ಹಾಸಿ ಮಲಗಿಸಿ ಹೊಚ್ಚಿ
ಹೆಂಗ ಮಂಗಲ ನುಡಿ,
ನಮ್ಮಪ್ಪ ಅರಸ ಛೀಮಾರಿ ಛೀ ಛೀ ಛೀ
ಅಳುಳುಳುಳುಳುಳೆಂದು ಹಾಡುತ್ತಿರಲು,
ಆ ಶಿಶುವು ಆ ಔಷಧದಿಂದೆ ನೋವು ಹೋಗಿ,
ತಾಯಿಯ ಮೊಲೆಹಾಲಿನಿಂದೆ ಹಸಿವು ಅಡಗಿ,
ಆ ಜೋಗುಳಹಾಡಿಗೆ ಸೊಂಪುದೋರಿ ಸುಮ್ಮನಾಗಿ,
ತೊಟ್ಟಿಲ ತೂಗುವುದರೊಳಗೆ ಜೋಕಬಂದು,
ಸುಖನಿದ್ರೆಯೊಳ್ ಮೈಮರೆದಿರಲು,
ಮಾಯೆಸರ್ಪನು ಬಂದು ಕಚ್ಚಿ ಕಾಣಿಸಿಕೊಳ್ಳದೆ ಹೋಗಲು,
ಆ ತಾಯಿ ತಂದಿ ಉಂಡು ಮಂಚದಮ್ಯಾಲೆ,
ರತಿಸಂಭೋಗಸುಖನಿದ್ರೆಯಲ್ಲಿರೆ,
ಮಾಳಿಗೆ ಬಿದ್ದು ಮರಣವಾಗಲು,
ಆ ತಾಯಿ ತಂದಿಯು ಮಗ
ಈ ಮೂವರು ಮಾಳಿಗೆ ಬಿದ್ದು ಮರಣವಾದರೆಂಬುದಾಯಿತ್ತಲ್ಲದೆ,
ಆ ಶಿಶುವಿನ ಸಾವು ಆರು ಅರಿಯರು.
ಇದರ ಹಾಂಗೆ ತನ್ನ ವಿಷಯದಿಚ್ಛೆಗೆ ಓಡ್ಯಾಡಿ
ಕಾಲನ ಬಾಧೆಗೆ ಬಿದ್ದು ಭವದುಃಖದೊಳಗಿರುವ ನರರಿಗೆ
ತಾನೇ ಗುರುವಾಗಿ ಬಂದು, ಸಾನಂದಸಿದ್ಧರಾಮನು
ಹೀನ ನರಕಿಗಳ ತಗೆದಂತೆ, ಆ ಶಿಷ್ಯನ ಕೈಹಿಡಿದೆತ್ತಿ
ಸರ್ವಕರಣಗಳ ಶುದ್ಧಗೊಳಿಸಿ, ಶಿಕ್ಷೋಪದೇಶವಮಾಡಿ,
ತನ್ನ ಚಿತ್ಶಕ್ತಿಯ ಕರಸಂಜ್ಞೆ ನುಡಿನೋಟದಿಂದೆ
ತೋರಿ ಹೇಳಿ ಕಾಣಿಸಿಕೊಡಲು,
ಆ ಚಿತ್ಶಕ್ತಿ ಹತಿಗೊಂಡು ನಿತ್ಯತ್ವದ ನುಡಿ ಮನದ ಮೈಲಿಗೆಯ ತೊಳೆದು
ತನ್ನ ಮೇಲುಮುಸುಕಿದ ಮಹಾಜ್ಞಾನದ ಬೆಳಗಿನಲ್ಲಿ
ಸರ್ವ ಅವಯವಂಗಳ ಕಸರು ಕಳೆದು,
ಆತ್ಮಜ್ಞಾನದೊಳಗೆ ಅಖಂಡಜ್ಞಾನದಲ್ಲಿರಿಸಿ, ಬ್ರಹ್ಮಜ್ಞಾನವನಾಚ್ಛಾದಿಸಿ,
ನಿಜಜ್ಞಾನದಲ್ಲಿ ಲೋಲ್ಯಾಡಿ, ಅರುವಿನ ಹರುಷದಲ್ಲಿ
ಹಿಂದಿಂದು ಹೇಯವಾಗೆ
ಮುಂದಿಂದು ಹಿತವಚನ ಮುಂದೆ ಅಲ್ಲಲ್ಲಾ,
ಸರ್ವವು ಸುಳ್ಳು ಸುಳ್ಳೆಂಬ ಮಹದರುವಿನ ಅನುಭವದ
ಶಿವೋಹಂ ಶಿವೋಹಂ ಶಿವೋಹಂ, ಸೋಹಂ, ಸೋಹಂ, ಸೋಹಂ,
ನಮೋ ನಮೋ, ಓಂ ಓಂ ಓಂ ಓಂ ಓಂ ಓಂ ಓಂ ಓಂ ಓಂ ಓಂ
ಏಂ ಏಂ ಏಂ ಏಂ ಏಂ ಎಂಬ ಮಹಾನಾದದೊಳಗೆ
ಆ ಕಾಲನ ಬಾಧೆ ಹೋಗಿ, ಭವದುಃಖ ಹಿಂಗಿ,
ಚಿತ್ತಚಿನ್ಮಯ ಸವಿಗೊಂಡು ನಿತ್ಯ ತೃಪ್ತನಾಗಿ,
ನಿಜಲೀಲಾನುಭವದ ಶಬ್ದಕ್ಕೆ ಮುಗ್ಧನಾಗಿ,
ಆತ್ಮಜ್ಞಾನದ ನಲಿಗಿನೊಳಗೆ ಲೋಲಗೊಂಡು,
ಎಚ್ಚರಡಗಿ ಅಚ್ಚಸುಖದಲ್ಲಿ ಸಮರಸವಾಗಿರಲು,
ಸಾವು ಬಂದು ಸಾವು ಸತ್ತು ಸಾವು ಸಾವಾಗಲು
ಆ ಶರಣನ ಅಂಗ, ಮನ, ಭಾವ, ಆತ್ಮಸಂಗವೊಂದಾಗಿರೆ
ಶ್ವಾಸ ಸುಳುಹುಗಳೆಲ್ಲಾ ನಿಂದು, ಚಿತ್ತ ಸತ್ತು ಸ್ವಸ್ಥವಾಗಲು,
ನಿಜಶರಣನ ಅರುವು ಲಿಂಗದಲ್ಲಿ
ಪರವಶರಾಗಿಹರೆಂಬುದು ಬಲ್ಲರಲ್ಲದೆ
ಅರುವು ಮರೆಗೊಂಡಿರ್ಪ ನಿರ್ಬೈಲ ಆರೂ ಅರಿಯರೋ.
ಆ ಶರಣ ತನ್ನರುವು ತಾನರಿಯ,
ಸತ್ತ ಸುದ್ದಿ ಸತ್ತವ ಅರಿಯ, ಬದುಕಿದವ ಬಲ್ಲ.
ಇದೇ ನಿಜಮುಕ್ತಿ; ಇದನರಿಯದೆ, ತತ್ವವನೋದಿ
ಗಾಳಿಗೊದರುವ ಒಡಕುಮಡಕಿಯ ಸ್ವರವ
ಕಡಿಮಿಯಾದ ನಾದವನು ಆಲಿಸಿ,
ನಾಹಂಬ್ರಹ್ಮವ ನುಡಿದು, ಕೋಹಂಬ್ರಹ್ಮವ ಬೆರೆತು,
ಮುಂದೆ ಸೋಹಂ ಬ್ರಹ್ಮವ ಹುಡುಕದೆ,
ದಾಸೋಹಂಬ್ರಹ್ಮವ ಕೂಡದೆ,
ನಮಗೆ ಸಾವು ಇಲ್ಲಾ, ನಮ್ಮ ದೇಹ ಬೈಲು ಮಾಡುವೆವೆಂದು
ಅದು ತಪ್ಪಲಿಕ್ಕೆ ಪಂಚತತ್ವದೇಹವು,
ಪಂಚತತ್ವಕ್ಕೆ ಕೂಡಿಸುವೆವು ಎಂಬುವರು.
ಅದು ಹಾಂಗಿರಲು, ಆ ದೇಹ ಬಯಲುವಾದರೇನು?
ಆ ಬಯಲಿಗೆ ಸಾವು ಇಲ್ಲವು.
ತಾವು ಮಾಡಿದರೆ ಆಗುವುದೆ? ತಾನೇ ಆಗಲರಿಯದು.
ಎಷ್ಟು ನಿಜ ತಿಳಿದರೇನೋ? ಅಷ್ಟು ತಾವಾಗದೇ,
ಭ್ರಷ್ಟರಾಗಿ ಹೋದರೋ
ನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ.