Index   ವಚನ - 76    Search  
 
ಪೃಥಿವ್ಯಪ್ತೇಜೋವಾಯ್ವಾಕಾಶಂಗಳಲ್ಲಿ ಪೃಥಿವ್ಯಪ್ತೇಜಸ್ಸುಗಳು ಸಾಕಾರಗಳೂ ವಾಯ್ವಾಕಾಶಂಗಳು ನಿರಾಕಾರಗಳೂ ಆಗಿ, ಸ್ಥೂಲ ಸೂಕ್ಷ್ಮಕಾರಣಂಗಳಾಗಿಹವು. ಪೃಥ್ವಿಯಲ್ಲೈದು ಗುಣಗಳೂ ಜಲದಲ್ಲಿ ನಾಲ್ಕು ಗುಣಗಳೂ ಅಗ್ನಿಯಲ್ಲಿ ಮೂರು ಗುಣಗಳೂ ವಾಯುವಿನಲ್ಲೆರಡು ಗುಣಗಳೂ ಇರ್ಪವು. ಆಕಾಶದಲ್ಲೊಂದು ಗುಣವಿರ್ಪುದು. ಆತ್ಮನು ನಿರ್ಗುಣಮಾಗಿ ಸಕಲಗುಣಂಗಳಿಗೂ ತಾನು ಕಾರಣಮಾಗಿಹನು. ಅದೆಂತೆಂದೊಡೆ: ನಿರ್ಗುಣಮಾದ ಬಿಂದುಪದಾರ್ಥವು ಸಗುಣರೂಪಮಾದ ಮನುಷ್ಯರಿಗೆ ತಾನು ಕಾರಣಮಾಗಿರ್ಪಂದದಿ ಆತ್ಮನಿಹನು. ಪಂಚವರ್ಣಂಗಳು ಸತ್ವರಜಸ್ತಮೋಗುಣಂಗಳು. ನಾದ ಬಿಂದು ಕಲೆಗಳು ಬಾಲ್ಯ ಯೌವನ ಕೌಮಾರ ವಾರ್ಧಕ್ಯಂಗಳು. ಇವೆಲ್ಲವೂ ಪ್ರಪಂಚಕ್ಕೆ ಗುಣಂಗಳಲ್ಲದೆ ಆತ್ಮನ ಗುಣವಲ್ಲ. ಅಂತಪ್ಪ ಆತ್ಮನೇ ಶಿವನು, ಆಕಾಶವೇ ವಿಷ್ಣು, ವಾಯುವೇ ಬ್ರಹ್ಮನು. ಸಾಕಾರದಲ್ಲಿ ಅಗ್ನಿಯೇ ರುದ್ರನು, ಜಲವೇ ವಿಷ್ಣು, ಪೃಥ್ವಿಯೇ ಬ್ರಹ್ಮನು. ಇವು ಒಂದಕ್ಕೊಂದು ಸೃಷ್ಟಿ ಸ್ಥಿತಿ ಸಂಹಾರಹೇತುಗಳಾಗಿ, ಎಲ್ಲವೂ ಆತ್ಮನಲ್ಲಿ ಲಯವನೈದುತ್ತಿಹವು. ಅಂತಪ್ಪ ಆತ್ಮಸ್ವರೂಪಮೆತೆಂದೊಡೆ: ದೃಷ್ಟಿಗೋಚರಮಲ್ಲ, ಒಂದು ವಸ್ತುವಿನಲ್ಲಿ ಸಾಮ್ಯಗೋಚರಮಲ್ಲ. ಅದಾವುದೆಂದೊಡೆ: ವಾಯ್ವಾಕಾಶಾತ್ಮಸ್ವರೂಪಿಗಳಾದ ತ್ರಿಮೂರ್ತಿಗಳು. ವಾಯುರೂಪಮಾದ ಬ್ರಹ್ಮನೇ ಲಕ್ಷ್ಮಿಯು, ಆಕಾಶರೂಪಮಾದ ವಿಷ್ಣುವೇ ಮಹಾದೇವಿಯು, ಆತ್ಮರೂಪಮಾದ ಶಿವನೇ ಶಾರದೆಯು. ವಾಯುರೂಪಮಾದ ಬ್ರಹ್ಮನು ಆತ್ಮರೂಪಮಾದ ಶಾರದೆಯನ್ನು ಕೂಡಿಹನು. ಆಕಾಶರೂಪಮಾದ ವಿಷ್ಣುವು ವಾಯುರೂಪಮಾದ ಲಕ್ಷ್ಮಿಯಂ ಕೂಡಿಹನು. ಆತ್ಮರೂಪಮಾದ ಶಿವನು ಆಕಾಶರೂಪಮಾದ ಮಹಾದೇವಿಯಂ ಕೂಡಿಹನು. ಆತ್ಮನೇ ವಿವೇಕವೆಂದು ತಿಳಿವುದು, ವಿವೇಕವೇ ಸತ್ಯಜ್ಞಾನಾಂದಸ್ವರೂಪು, ವಿವೇಕದಿಂದ ಸಕಲಪ್ರಪಂಚವೆಲ್ಲಾ ಮಿಥ್ಯೆಯಾಗಿಹುದು. ಅಂತಪ್ಪ ಸಕಲಪ್ರಪಂಚಮೆಲ್ಲವೂ ಮಿಥ್ಯವೆಂದು ತಿಳಿದು ಆ ಪ್ರಪಂಚದಲ್ಲಿ ಹೊಂದಿರ್ಪ ವಿವೇಕವೇ ಮುಕ್ತಿಯು, ಆಮುಕ್ತಿಯೇ ಶಿವನು. ಅಂತಪ್ಪ ವಿವೇಕದಲ್ಲಿನಾಹಂಭಾವವಡಗಿ, ಅಂತಪ್ಪ ವಿವೇಕವೇ ಮಹಾಲಿಂಗವು, ಅಂತಪ್ಪ ವಿವೇಕಮಿರ್ದಲ್ಲಿ ಪಾಪಗಳು ಹೊಂದದೇ ಇಹವು. ಅದುಕಾರಣ, ತಾನು ತಾನಾಗಿರ್ಪ ನಿಜಾನಂದಸುಖದೊಳೋಲಾಡುತಿರ್ಪಂತೆ ಮಾಡಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.