Index   ವಚನ - 555    Search  
 
ಅಂದಿನ ಶರಣರಿಗೆ ಇಂದಿನವರು ಸರಿಯಲ್ಲವೆಂದು ನುಡಿವ ಸಂದೇಹ ಸೂತಕ ಹೊಲೆಯರ ಮಾತ ಕೇಳಲಾಗದು. ಆ ಪಂಚಮಹಾಪಾತಕರ ಮುಖವ ನೋಡಲಾಗದು. ಅದೆಂತೆಂದೊಡೆ: ತಾ ಮೂಕೊರೆಯನೆಂದರಿಯದೆ ಕನ್ನಡಿಗೆ ಮೂಗಿಲ್ಲೆಂಬಂತೆ. ತಾ ಕುಣಿಯಲಾರದೆ ಅಂಗಳ ಡೊಂಕೆಂಬಂತೆ, ತನ್ನಲ್ಲಿ ನಡೆನುಡಿ ಸಿದ್ಧಾಂತವಿಲ್ಲದೆ ಇತರವ ಹಳಿವ ಅಧಮ ಮಾದಿಗರನೇನೆಂಬೆನಯ್ಯಾ! ಅಷ್ಟಾವರಣ ಪಂಚಾಚಾರವು ಅಂದೊಂದು ಪರಿ ಇಂದೊಂದು ಪರಿಯೇ? ಷಟ್‍ಸ್ಥಲ ಸ್ವಾನುಭಾವವು ಅಂದೊಂದು ಪರಿ ಇಂದೊಂದು ಪರಿಯೇ? ಭಕ್ತಿ ವಿರಕ್ತಿ ಉಪರತಿ ಜ್ಞಾನ ವೈರಾಗ್ಯ ಅಂದೊಂದು ಪರಿ ಇಂದೊಂದು ಪರಿಯೇ? ನಡೆನುಡಿ ಸಿದ್ಧಾಂತವಾದ ಶರಣರ ಘನವು ಅಂದೊಂದು ಪರಿ ಇಂದೊಂದು ಪರಿಯೇ? ಇಂತೀ ವಿಚಾರವನರಿಯದೆ ಪರಸಮಯವನಾದಡೂ ಆಗಲಿ, ಶಿವಸಮಯವನಾದಡೂ ಆಗಲಿ, ವರ್ಮಗೆಟ್ಟು ನುಡಿವ ಕರ್ಮಜೀವಿಗಳ ಬಾಯಲ್ಲಿ ಬಾಲ್ವುಳ ಸುರಿಯದೆ ಮಾಣ್ಬುವೆ ಹೇಳಾ ಅಖಂಡೇಶ್ವರಾ?