Index   ವಚನ - 352    Search  
 
ಅಷ್ಟದಳಕಮಲವ ಮೆಟ್ಟಿ ಚರಿಸುವ ಹಂಸನ ಭೇದವ ಹೇಳಿಹೆನು: ಪೂರ್ವದಳಕೇರಲು ಗುಣಿಯಾಗಿಹನು. ಅಗ್ನಿದಳಕೇರಲು ಕ್ಷುಧೆಯಾಗಿಹನು. ದಕ್ಷಿಣದಳಕೇರಲು ಕ್ರೋಧಿಯಾಗಿಹನು. ನೈಋತ್ಯದಳಕೇರಲು ಅಸತ್ಯನಾಗಿಹನು. ವರುಣದಳಕೇರಲು ನಿದ್ರೆಗೆಯ್ವುತಿಹನು. ವಾಯುದಳಕೇರಲು ಸಂಚಲನಾಗಿಹನು. ಉತ್ತರದಳಕೇರಲು ಧರ್ಮಿಯಾಗಿಹನು. ಈಶಾನ್ಯದಳಕೇರಲು ಕಾಮಾತುರನಾಗಿಹನು. ಈ ಅಷ್ಟದಳಮಂಟಪದ ಮೇಲೆ ಹರಿದಾಡುವ ಹಂಸನ ಕುಳನ ತೊಲಗಿಸುವ ಕ್ರಮವೆಂತುಟಯ್ಯಾಯೆಂದೊಡೆ: ಅಷ್ಟದಳಮಂಟಪದ ಅಷ್ಟಕೋಣೆಗಳೊಳಗೆ ಅಷ್ಟ ಲಿಂಗಕಳೆಯ ಪ್ರತಿಷ್ಠಿಸಿ ಹಂಸನ ನಟ್ಟ ನಡುಮಧ್ಯದಲ್ಲಿ ತಂದು ನಿಲಿಸಲು ಮುಕ್ತಿಮೋಕ್ಷವನೆಯ್ದಿ ಪರವಶನಾಗಿಪ್ಪನಯ್ಯ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.