ವಚನ - 1459     
 
ಯುಗದ ಉತ್ಸಾಹವ ನೋಡಿರೆ! ಪಂಚಶಕ್ತಿಗಳಿಗೆ ಪಂಚಪ್ರಧಾನರು. ಅವರ ಆಗುಹೋಗನು ಆ ಶರಣನೆ ಬಲ್ಲ. ಆ ಶರಣನು ತಾನು ತಾನಾಗಿ ಆರು ದರುಶನಕ್ಕೆ ಯಾಚಕನಲ್ಲ! ಆರು ದರುಶನಕ್ಕೆ ಮುಯ್ಯಾನುವನಲ್ಲ, ವೇದ ಶಾಸ್ತ್ರಾಗಮ ಪುರಾಣ ಛಂದಸ್ಸು, ನಿಘಂಟುಗಳೆಂಬುವಕ್ಕೆ ಭೇದಕನಲ್ಲ, ಅದೆಂತೆಂದಡೆ: ಅವರ ಅಂಗದ ಮೇಲೆ ಗುರುವಿಲ್ಲ ಲಿಂಗವಿಲ್ಲ ಜಂಗಮವಿಲ್ಲ ಪ್ರಸಾದವಿಲ್ಲ ಪಾದೋದಕವಿಲ್ಲದ ಭಾಷೆ. ಆ ಗುರು ಲಿಂಗ ಜಂಗಮ ಪ್ರಸಾದ ಪಾದೋದಕ ಏಕಾರ್ಥವಾದ ಕಾರಣ ಪ್ರಾಣಿಗಳೆಲ್ಲವು ಪ್ರಣಾಮಂಗೆಯ್ಯುತ್ತಿದ್ದವು, ಜೀವಿಗಳೆಲ್ಲವು ಜಯಜೀಯಾ ಎನುತ್ತಿದ್ದವು. ಆತ್ಮಂಗಳೆಲ್ಲ ಅನುವ ಬೇಡುತ್ತಿದ್ದವು. ಗುಹೇಶ್ವರಾ ಸಂಗನಬಸವಣ್ಣನ ಪಾದಕ್ಕೆ ಈರೇಳುಭುವನವೆಲ್ಲವೂ ಜಯ ಜೀಯಾ ಎನುತ್ತಿದ್ದವು.