Index   ವಚನ - 9    Search  
 
ವೇದವೆಂಬುದು ವೇದ್ಯರಿಗಲ್ಲದೆ ಸಾಧ್ಯವಲ್ಲ. ಅದೆಂತೆಂದಡೆ: ಬಿಂದು ವ್ಯಂಜನ ಗುರು ಲಘು ಸಮಾಸ ವಿಭಕ್ತಿಯ ನೇಮ ಬೀಜಾಕ್ಷರ ಐವತ್ತೆರಡರ ಭೇದದೊಳಗಲ್ಲದೆ, ಇಂತಿವೆಲ್ಲವೂ ಒಂದರಲ್ಲಿ ಹುಟ್ಟಿ, ಒಂದರಲ್ಲಿ ಬೆಳೆದು, ಒಂದರಲ್ಲಿ ಲಯವಹ ಕಾರಣ, ಇಂತೀ ವೇದಿಗಳೆಲ್ಲರೂ ವೇದಾಂತ ಸಿದ್ಧಾಂತದನುವನರಿಯದೆ, ಯಾಗವ ಮಾಡಿಹೆವೆಂದು ತಿಲ ಘೃತ ಸಮಿದೆ ಮೊದಲಾದ ಅಜಹತ ದಿಗ್ಭಂಧನಂಗಳಲ್ಲಿ ಪ್ರವರ್ತನ ಗ್ರಹಂಗಳಲ್ಲಿ ಕರ್ಮವ ಮಾಡಿ, ಅಗ್ನಿಗಾಹುತಿ ಕೊಟ್ಟಲ್ಲಿ, ಆತ ವೇದಾಂತನೆ ಬಲುರೋಗಾಂತನಲ್ಲದೆ? ಇನ್ನು ವೇದಾಂತಸಿದ್ಧಿಯ ಕೇಳಿರೊ: ಪೂರ್ವದಲ್ಲಿ ಹುಟ್ಟುವದನರಿದು, ಮಧ್ಯದಲ್ಲಿ ಬೆಳೆವುದ ನಿಧಾನಿಸಿ, ಉತ್ತರದಲ್ಲಿ ಕಟ್ಟಕಡೆ ಎಂಬುದ ವಿಚಾರಿಸಿ ಲಕ್ಷಿಸಿ, ಇಂತೀ ತ್ರಿವಿಧದ ಭೇದವ ಕಿತ್ತುಹಾಕಿ, ಓಂ ಎಂಬ ಅರ್ಥವ ತಿಳಿದು, ನಯೆಂಬ ನಕಾರಮಂ ತಿಳಿದು, ನಾನಾರೆಂಬುದ ಭಾವಿಸಿ, ಮಯೆಂಬ ಮದರೂಪಂ ವರ್ಜಿಸಿ, ಶಿಯೆಂಬ ಶಿಕಾರವ ಸ್ವೀಕರಿಸಿ, ಯಯೆಂಬ ಯಕಾರವ ನಾಲ್ಕರಲ್ಲಿ ಏಕೀಕರಿಸಿದ ಮತ್ತೆ, ವೇದವೇದ್ಯನು ನೋಡಾ, ಲಲಾಮಭೀಮಸಂಗಮೇಶ್ವರಲಿಂಗವು.