Index   ವಚನ - 120    Search  
 
ಜಗದೊಳಗೆ ಹುಟ್ಟಿ ಜಗದ ಹಂಗಿಗರಾಗಿ, ನಾವು ಜಂಗಮ, ನಾವು ಭಕ್ತರೆಂಬ ನುಡಿಗೆ ನಾಚರು ನೋಡಾ. ಅಪ್ಪುವಿನ ಘಟನ ಹೊತ್ತುಕೊಂಡು ಅನ್ನಪಾಂಗಳಿಗೆ ಅನುಸರಿಸಿ ನಡೆವುತ್ತ, ಹೊನ್ನು, ಹೆಣ್ಣು, ಮಣ್ಣನೀವವರ ಬಾಗಿಲ ಕಾಯ್ವ ಅಣ್ಣಗಳ ವೇಷಕ್ಕೆ ಶರಣಾರ್ಥಿ. ಅವರ ಆಶಾಪಾಶವ ಕಂಡು, ಹೇಸಿತ್ತೆನ್ನ ಮನವು. ಅದಂತಿರಲಿ, ಅದು ಬ್ರಹ್ಮನ ಹುಟ್ಟು, ವಿಷ್ಣುವಿನ ಸ್ಥಿತಿ, ರುದ್ರನ ಲಯಕ್ಕೊಳಗಾಗಿ ಹೋಯಿತ್ತು ಅಂತಲ್ಲ ಕೇಳಿರಣ್ಣ. ಜಂಗಮವಾದರೆ ಜಗದೊಳಗೆ ಹುಟ್ಟಿ, ಜಗದ ಹಂಗ ಹರಿದು, ಹೊನ್ನು, ಹೆಣ್ಣು, ಮಣ್ಣು ಕಣ್ಣಿಲೆ ನೋಡಿ ಕಾಮಿಸದೆ, ಮನದಲ್ಲಿ ನೆನೆಯದೆ, ಮಾಯವನುಣ್ಣದೆ, ಆಶೆಗೊಳಗಾಗದೆ, ವೇಷವ ಹೊರದೆ, ದೇಶದ ಮನುಜರ ಸುತ್ತಿದ ಪಾಶಕ್ಕೆ ಹೊರಗಾಗಿ ಸುಳಿವ ಜಂಗಮದ ಈಶನೆಂದೆ ಕಾಂಬೆ. ಆ ಜಂಗಮಕ್ಕೆ ಅರ್ಥ, ಪ್ರಾಣ, ಅಭಿಮಾನವನೊಪ್ಪಿಸಿ, ತಪ್ಪದೆ ಒಡೆಯನೆಂದರಿದು ಮಾಡುವ ಭಕ್ತನ ಎಂತಿಪ್ಪನೆಂದು ಕಾಂಬೆ. ಇದನೆಂತಾದರೂ ಒಪ್ಪುಗೊಳ್ಳ ಎನ್ನ. ಬಸವಪ್ರಿಯ ಕೂಡಲಚೆನ್ನಸಂಗನ ಬಸವಣ್ಣನಲ್ಲಿ ಶರಣಗಣಂಗಳು.