Index   ವಚನ - 130    Search  
 
ತೀರ್ಥ ಯಾತ್ರೆ ಲಿಂಗದರುಶನಕ್ಕೆ ಹೋಗಿ, ಕರ್ಮವ ಹಿಂಗಿಸಿಕೊಂಡೆನೆಂಬ ಭಂಗಿತರ ಮಾತ ಕೇಳಲಾಗದು. ಅದೇನು ಕಾರಣವೆಂದರೆ, ತೀರ್ಥವಾವುದು, ಯಾತ್ರೆ ಯಾವುದು, ಲಿಂಗವಾವುದು, ಬಲ್ಲರೆ ನೀವು ಹೇಳಿರೆ. ಮಹಾಘನ ಗುರುಪಾದತೀರ್ಥದಿಂದ ವೆಗ್ಗಳ ತೀರ್ಥ ಉಂಟೆ ? ಜಗತ್ಪಾವನ ಜಂಗಮ ದರುಶನದಿಂದ ಬೇರೆ ಯಾತ್ರೆ ಉಂಟೆ? ಇಂಗಿತವನರಿದ ಬಳಿಕ ತನ್ನ ಅಂಗದ ಮೇಲಿರ್ಪ ಲಿಂಗವಲ್ಲದೆ ಬೇರೆ ಲಿಂಗ ಉಂಟೆ? ಇದನರಿಯದೆ ಇನ್ನು ತೀರ್ಥಯಾತ್ರೆ ಲಿಂಗ ದರುಶನ ಉಂಟೆಂಬ ಅಂಗಹೀನರ ಮುಖವ ನೋಡಲಾಗದು, ಬಸವಪ್ರಿಯ ಕೂಡಲಚೆನ್ನಬಸವಣ್ಣ.