Index   ವಚನ - 103    Search  
 
ಹಾಹಾ! ವೇದವೆ ತತ್ವವಾದಡೆ, ಮಾದಾರನ ಮನೆಯಲುಂಡನೊಬ್ಬ. ನಿಧಾನವುಳ್ಳ ಉಪಾಧ್ಯಾಯರಾರೂ ಇಲ್ಲದಾದಡೆ, ಶಾಸ್ತ್ರವೆ ತತ್ವವಾದಡೆ ಶಿವರಾತ್ರಿಯನೊಬ್ಬ ಬೇಡಂಗಿತ್ತುದನೊಬ್ಬ ಶ್ರೋತ್ರಿಯಂಗೀಯಲಾಗದೆ? ಆಗಮವಿಧಿಯಲ್ಲಿ ಮಂತ್ರ ಮೂರುತಿಯೆಂಬ ಮಾತಂತಿರಲಿ. ಅದ ಕೇಳಲಾಗದು ಭ್ರಾಂತು ಬೇಡ. ಭಾವಮೂರುತಿ ಬಲ್ಲ ಪ್ರಮಾಣವಿದೆ. ಆ ಕುಲವೆಂದಡೆ ಹೊಕ್ಕ ಕಕ್ಕಯ್ಯಗಳ ಮನೆಯ. ಅಕ್ಕಟಾ, ನಿಮ್ಮ ತರ್ಕ ಮುಕ್ಕಾಯಿತ್ತು, ಲೋಕವರಿಯದೆ? ಕಲ್ಲಲಿಟ್ಟು ಕಾಲಲೊದೆದಡೆ, ಅಲ್ಲಿ ಮೂರುತಿ ನುಡಿಯಿತ್ತಲ್ಲಯ್ಯಾ. ಬಲ್ವದನು ದ್ವಿಜರು ನೀವೆಲ್ಲರೂ ಹೇಳಿರೆ, ಸಲ್ಲದು, ನಿಮ್ಮ ವಾದ ನಿಲ್ಲಲಿ, ಬಲ್ಲಿದ ನಡೆದುದೇ ಬಟ್ಟೆ. ಮಹಾಲಿಂಗ ಕಲ್ಲೇಶ್ವರಾ, ಲಿಂಗಾಚಾರಿಗಳು ನಿಸ್ಸೀಮರಯ್ಯಾ.