Index   ವಚನ - 43    Search  
 
ಅರಿವು ಸಾಧ್ಯವಾಯಿತ್ತೆಂದು, ಗುರುಲಿಂಗಜಂಗಮವ ಬಿಡಬಹುದೆ? ಸಂದು ಸಂಶಯವಳಿದು ಅಖಂಡ ಜ್ಞಾನವಾಯಿತ್ತೆಂದು ಪರಧನ ಪರಸ್ತ್ರೀಯರುಗಳಿಗೆ ಅಳುಪಬಹುದೆ? 'ಯತ್ರ ಜೀವಃ ತತ್ರ ಶಿವಃ' ಎಂಬ ಅಭಿನ್ನ ಜ್ಞಾನವಾಯಿತ್ತೆಂದು ಶುನಕ ಸೂಕರ ಕುಕ್ಕುಟ ಮಾರ್ಜಾಲಂಗಳ ಕೂಡೆ ಭುಂಜಿಸಬಹುದೆ? ಭಾವದಲ್ಲಿ ತನ್ನ ನಿಜದ ನೆಲೆಯನರಿತಿಹುದು, ಸುಜ್ಞಾನ ಸತ್ಕ್ರಿಯಾ ಸುನೀತಿ ಮಾರ್ಗದಲ್ಲಿ ವರ್ತಿಸುವುದು. ಹೀಂಗಲ್ಲದೆ ಜ್ಞಾನವಾಯಿತ್ತೆಂದು ತನ್ನ ಮನಕ್ಕೆ ಬಂದಹಾಂಗೆ ಮೀರಿನುಡಿದು ನಡೆದೆನಾದಡೆ ಶ್ವಾನಗರ್ಭದಲ್ಲಿ ಹುಟ್ಟಿಸದೆ ಬಿಡುವನೆ ಚೆನ್ನಮಲ್ಲಿಕಾರ್ಜುನಯ್ಯನು?