ತಾವು ಗುರುವೆಂದು ಮುಂದಣವರಿಗನುಗ್ರಹವ ಮಾಡುವರಯ್ಯಾ,
ತಾವು ಗುರುವೆಂತಾದರೊ ! ಎಲ್ಲರಿಗೆಯೂ ಒಂದೇ ದೇಹ.
"ಸಪ್ತಧಾತುಸಮಂ ಪಿಂಡಂ ಸಮಯೋನಿಸಮುದ್ಭವಂ |
ಆತ್ಮಾಕಾಯಸಮಾಯುಕ್ತಂ ವರ್ಣಾನಾಂ ಕಿಂ ಪ್ರಯೋಜನಯಂ"
ಎಂದುದಾಗಿ, ಗುರುವೆಂಬುದು ತಾನು ಪರುಷವು
ಆ ಪರುಷವು ಮುಟ್ಟಲೊಡನೆ ಉಳಿದ ಲೋಹಂಗಳು ಸುವರ್ಣವಾದುವಲ್ಲದೆ,
ಆ ಪರುಷವೆ ಆಗಲರಿಯವು-ಅದು ಗುರುಸ್ಥಲವಲ್ಲ ನಿಲ್ಲು ಮಾಣು.
ಗುರುವೆಂಬುದು ತಾನು ಸ್ವಯಂ ಜ್ಯೋತಿಪ್ರಕಾಶವು,
ಅಂತಪ್ಪ ಸ್ವಯಂಜ್ಯೋತಿ ಪ್ರಕಾಶವ ತಂದು
ಪರಂಜ್ಯೋತಿಯ ಹೊತ್ತಿಸಿದಡೆ, ಆ ಜ್ಯೋತಿ ತನ್ನಂತೆ ಮಾಡಿತ್ತು.
ಅದಾವ ಜ್ಯೋತಿಯೆಂದಡೆ ಪಶ್ಚಿಮ ಜ್ಯೋತಿ.
ಆ ಪಶ್ಚಿಮ ಜ್ಯೋತಿಯ ಬೆಳಗಿನಿಂದ ಪ್ರಾಣಲಿಂಗವ ಕಂಡು ಸುಖಿಯಾದೆನು.
ನಾಲ್ಕು ವೇದಾರ್ಥ: ಅಜಪಗಾಯತ್ರಿ.
ಅಜಪಗಾಯತ್ರಿಯರ್ಥ: ಪ್ರಾಣಾಯಾಮ.
ಪ್ರಾಣಾಯಾಮದಿಂದ ಪ್ರಾಣಲಿಂಗ ಸಂಬಂಧವ ಮಾಡೂದು.
ಇಷ್ಟರಲ್ಲಿ ತಾನು ಸ್ವತಂತ್ರನಾದಡೆ, ಇಷ್ಟಲಿಂಗವನಾರಿಗಾದರೂ ಕೊಡುವುದು.
ಇಲ್ಲದಿದ್ದರೆ ಅಂಧಕನ ಕೈಯ ಹೆಳವ ಹಿಡಿದಂತೆ ಕಾಣಾ
ಕೂಡಲಚೆನ್ನಸಂಗಮದೇವಯ್ಯಾ.