Index   ವಚನ - 1389    Search  
 
ಪೃಥ್ವ್ಯಾದಿ ಪಂಚಭೂತಂಗಳು ಇದಕ್ಕೆ ವಿವರ: ಅಸ್ಥಿ ಚರ್ಮ ಮಾಂಸ ರೋಮ ಮಜ್ಜೆ- ಇವೈದು ಪೃಥ್ವಿಯ ಅಂಶ. ಶುಕ್ಲ ಶೋಣಿತ ಶ್ಲೇಷ್ಮ ಪಿತ್ತ ರಕ್ತ- ಇವೈದು ಅಪ್ಪುವಿನ ಅಂಶ. ಹಸಿವು ತೃಷೆ ನಿದ್ರೆ ಆಲಸ್ಯ ಸ್ತ್ರೀಸಂಗ- ಇವೈದು ಅಗ್ನಿಯ ಅಂಶ. ಹರಿವುದು ಕುಳ್ಳಿರುವುದು ಏಳುವುದು ಮೈಮುರಿವುದು ನಡೆವುದು- ಈ ಐದು ವಾಯುವಿನ ಅಂಶ. ಡಂಬು ಪ್ರಕಟ ಪ್ರಪಂಚು ಅಭ್ರಚ್ಛಾಯ ಆನಂದ- ಇವೈದು ಆಕಾಶದ ಅಂಶ. ಇಂತೀ ಅಂಗ ಅಶುದ್ಧಂಗಳ ಬಿಟ್ಟು ಲಿಂಗಾಂಗವ ಮಾಡಬಲ್ಲಡೆ ಕೂಡಲಚೆನ್ನಸಂಗಯ್ಯನಲ್ಲಿ ಶರಣನೆನಿಸುವನು.