Index   ವಚನ - 2    Search  
 
ಅಕ್ಕಿ, ಬೇಳೆ, ಬೆಲ್ಲ, ಉಪ್ಪು, ಮೆಣಸು, ಅಡಕೆ, ಫಲ, ರಸ, ದ್ರವ್ಯ ಮುಂತಾದದ್ರವ್ಯಕ್ಕೆ ವ್ರತವೊ? ಮುಟ್ಟುವ ತಟ್ಟುವ ಸೋಂಕುವ ಚಿತ್ತಕ್ಕೆ ವ್ರತವೊ? ಇವು ಬಾಹ್ಯದಲ್ಲಿ ಮಾಡುವ ಸೌಕರಿಯವಲ್ಲದೆ ವ್ರತಕ್ಕೆ ಸಲ್ಲ; ವ್ರತವಾವುದೆಂದಡೆ: ತನ್ನಯ ಸ್ವಪ್ನದಲ್ಲಿ ತನಗಲ್ಲದುದ ಕಂಡಡೆ, ತಾ ಮುಟ್ಟದುದ ಮುಟ್ಟಿದಡೆ, ತಾ ಕೊಳ್ಳದುದ ಕೊಂಡಡೆ, ಆ ಸೂಕ್ಷ್ಮ ತನುವಿನಲ್ಲಿ ಆ ತನುವಂ ಬಿಟ್ಟು ನಿಂದುದು ವ್ರತ. ಸ್ಥೂಲತನುವಿನಲ್ಲಿ ಸರ್ವರ ನಿಂದೆಗೊಡಲಾಗದೆ, ಮಾಡಿಕೊಂಡ ನೇಮಕ್ಕೆ ಕೇಡುಬಂದಲ್ಲಿ ಆ ಅಂಗಕ್ಕೆ ಓಸರಿಸದೆ ನಿಂದುದು ಆಚಾರ. ಇಂತೀ ಅಂತರಂಗದಲ್ಲಿ ವ್ರತ, ಬಹಿರಂಗದಲ್ಲಿ ಆಚಾರ, ಇಂತೀ ಉಭಯ ಸಿದ್ಧವಾಗಿ ನಡೆವುದೆ ವ್ರತ ಆಚಾರ; ಇಂತಿವನರಿದು ಮರೆದಲ್ಲಿ, ತಾ ಮಾಡಿಕೊಂಡ ಕುತ್ತಕ್ಕೆ ಹಾಡಿ ಮದ್ದನರೆದಂತೆ, ಜಗಕ್ಕೆ ಭಕ್ತನಾಗಿ ಆತ್ಮಂಗೆ ಅನುಸರಣೆಯಾದಲ್ಲಿ ಆಚಾರವೆ ಪ್ರಾಣವಾದ ರಾಮೇಶ್ವರಲಿಂಗಕ್ಕೆ ಸಲ್ಲದ ನೇಮ.