Index   ವಚನ - 26    Search  
 
ಏರಿಯ ಕೆಳಗೆ ಬಿದ್ದ ನೀರು ಪೂರ್ವದ ತಟಾಕಕ್ಕೆ ಏರಬಲ್ಲುದೆ? ವ್ರತಾಚಾರವ ಮೀರಿ ಕೆಟ್ಟ ಅನಾಚಾರಿ ಸದ್ಭಕ್ತರ ಕೂಡಬಲ್ಲನೆ? ದೇವಾಲಯದಲ್ಲಿ ಸತ್ತಡೆ ಸಂಪ್ರೋಕ್ಷಣವಲ್ಲದೆ ದೇವರು ಸತ್ತಲ್ಲಿ ಉಂಟೆ ಸಂಪ್ರೋಕ್ಷಣ? ಅಂಗದಲ್ಲಿ ಮರವೆಗೆ ಹಿಂಗುವ ಠಾವಲ್ಲದೆ, ಮನವರಿದು ತಾಕು ಸೋಂಕಿಗೆ ಹೆದರದೆ ಕೂಡಿದ ದುರ್ಗಣಕ್ಕುಂಟೆ ಪ್ರಾಯಶ್ಚಿತ್ತ? ಇಂತಿವ ಕಂಡಲ್ಲಿ ಗುರುವಾದಡೂ ಬಿಡಬೇಕು, ಲಿಂಗವಾದಡೂ ಬಿಡಬೇಕು, ಜಂಗಮವಾದಡೂ ಬಿಡಬೇಕು; ಆಚಾರವೆ ಪ್ರಾಣವಾದ ರಾಮೇಶ್ವರಲಿಂಗವಾದಡೂ ಬಿಡಬೇಕು