Index   ವಚನ - 117    Search  
 
ಲಿಂಗಕ್ಕೂ ತಮಗೂ ಸಹಭಾಜನ ಸಹಭೋಜನವಾಹಲ್ಲಿ ಇದಿರಿಟ್ಟ ಪದಾರ್ಥಂಗಳ ಲಿಂಗಕ್ಕೆ ತೋರಿ, ತಾ ಕೊಂಬಲ್ಲಿ ದೃಷ್ಟವಾಯಿತ್ತು. ಸ್ವಪ್ನ ಸುಷುಪ್ತಿಗಳಲ್ಲಿ, ಮಿಕ್ಕಾದ ಏಕಾಂತ ಸತಿ ಕೂಟಂಗಳಲ್ಲಿ ಅದಕ್ಕೆ ದೃಷ್ಟವಹ ಸಹಭೋಜನವಾವುದಯ್ಯಾ? ಯೋನಿ ಸ್ವಪ್ನ ಸುಷುಪ್ತಿ ಮುಂತಾದ ಭಾವದ ಸಹಭೋಜನ ಎಲ್ಲಿ ಇದ್ದಿತ್ತು? ಆ ಭಾಜನದ ಸಹಭೋಜನದ ಸಂಬಂಧ ಎಲ್ಲಿದ್ದಿತು? ಅದು ಕಲ್ಲಿನೊಳಗಣ ನೀರು, ನೀರೊಳಗಣ ಶಿಲೆ, ಇದಾರಿಗೂ ಅಸಾಧ್ಯ ನೋಡಾ. ಅದು ಕಾಯದ ಹೊರಗಾದ ಸುಖ, ಸುಖದ ಹೊರಗಾದ ಅರ್ಪಿತ. ಇಂತೀ ಗೊತ್ತಮುಟ್ಟಿ ಸಹಭೋಜನದಲ್ಲಿ ಅರ್ಪಿಸಬಲ್ಲವಂಗೆ ಆಚಾರವೆ ಪ್ರಾಣವಾದ ರಾಮೇಶ್ವರಲಿಂಗವು ಸಹಭಾಜನ ಭೋಜನವಾಗಿಪ್ಪನು.